ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ, ಆರ್‌ಜೆಡಿ ಪರಮೋಚ್ಚ ನಾಯಕ ಲಾಲು ಪ್ರಸಾದ್ ಯಾದವ್ ಮತ್ತವರ ಪುತ್ರರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 7 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರಿಗೆ ನ್ಯಾಯಾಲಯ ಸೂಚಿಸಿದೆ.
ಲಾಲು ಅವರು ಕೇಂದ್ರ ರೈಲ್ವೇ ಸಚಿವರಾಗಿದ್ದಾಗ ಸರ್ಕಾರಿ ಉದ್ಯೋಗಕ್ಕೆ ಅನುಕೂಲ ಮಾಡಿಕೊಡುವ ಸ್ಥಾನಮಾನ ಹೊಂದಿದ್ದರು ಎಂದ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಈ ಆದೇಶ ಜಾರಿಗೊಳಿಸಿದರು.
ಅಪರಾಧ ನಡೆದಿದೆ ಎನ್ನಲು ಸಾಕಷ್ಟು ಪುರಾವೆಗಳಿವೆ ಎಂದಿರುವ ನ್ಯಾಯಾಲಯ ಲಾಲು ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಲ್ಲದೆ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಿರದ ಲಾಲು ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರಿಗೂ ಸಮನ್ಸ್ ನೀಡಿದೆ. ತೇಜ್ ಪ್ರತಾಪ್ ಯಾದವ್ ಹಗರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅದು ಹೇಳಿದೆ.
ಲಾಲುಪ್ರಸಾದ್ ಅವರು 2004ರಿಂದ 2009ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬದ ಹೆಸರಿಗೆ ಭೂಮಿ ವರ್ಗಾಯಿಸಿಕೊಂಡು ರೈಲ್ವೆಯಲ್ಲಿ ನೇಮಕಾತಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆಗಿನ ರೈಲ್ವೆ ನೇಮಕಾತಿ ಭಾರತೀಯ ರೈಲ್ವೆಯ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಸಿಬಿಐ ವಾದವಾಗಿತ್ತು
ದೆಹಲಿ ನ್ಯಾಯಾಲಯ ಮಾರ್ಚ್ 2023ರಲ್ಲಿ ಲಾಲು ಯಾದವ್, ಅವರ ಪತ್ನಿ ರಾಬ್ಡಿ ದೇವಿ ಹಾಗೂ ಮಗಳು ಮಿಸಾ ಭಾರತಿ ಅವರಿಗೆ ಜಾಮೀನು ನೀಡಿತ್ತು.