ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಗುರುವಾರ ಸಿಬಿಐ ಪ್ರತಿಕ್ರಿಯೆ ಕೇಳಿದೆ.
ತಮ್ಮನ್ನು ಸಿಬಿಐ ಬಂಧಿಸಿದ್ದನ್ನು ಆಕ್ಷೇಪಿಸಿ ಹಾಗೂ ನ್ಯಾಯಾಲಯ ತನ್ನನ್ನು ಸಿಬಿಐ ವಶಕ್ಕೆ ಒಪ್ಪಿಸಿರುವುದನ್ನು ಪ್ರಶ್ನಿಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆಯೂ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಸಿಬಿಐ ಪ್ರತಿಕ್ರಿಯೆ ಕೇಳಿದರು.
ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶ ಹಾಗೂ ಬಂಧನ ಮತ್ತು ಸಿಬಿಐ ವಶಕ್ಕೆ ನೀಡಿದ ಆದೇಶಗಳನ್ನು ಪ್ರಶ್ನಿಸಿ ಕವಿತಾ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ ಡಿ) ತನ್ನನ್ನು ಬಂಧಿಸಿದ ಬಳಿಕ ನ್ಯಾಯಾಂಗ ಬಂಧನದಲ್ಲಿರುವ ತನ್ನನ್ನು ವಿಚಾರಣೆಗೆ ಒಳಪಡಿಸಲು ಸಿಬಿಐಗೆ ಅನುಮತಿ ನೀಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆಯೂ ಅವರು ರಿಟ್ ಅರ್ಜಿಯಲ್ಲಿ ಕೋರಿದ್ದಾರೆ.
ವಿಚಾರಣಾ ನ್ಯಾಯಾಲಯ ನೀಡಿದ ಆದೇಶಗಳು ಕ್ರಿಮಿನಲ್ ಕಾನೂನಿನ ಸೆಕ್ಷನ್‌ಗಳನ್ನು ಉಲ್ಲಂಘಿಸುತ್ತವೆ ಮತ್ತು ಸಂವಿಧಾನದ ಅಡಿಯಲ್ಲಿ ನೀಡಲಾದ ಹಕ್ಕುಗಳಿಗೆ ಧಕ್ಕೆ ತರುತ್ತವೆ ಎಂದು ಅವರು ದೂರಿದ್ದಾರೆ.
ಇ ಡಿ ಪ್ರಕರಣದಲ್ಲಿ ಆಕೆ ಸಲ್ಲಿಸಿರುವ ಜಾಮೀನು ಅರ್ಜಿ ಸೇರಿದಂತೆ ಮೇ 24ರಂದು ಎರಡೂ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಕುರಿತಂತೆ ಕವಿತಾ ಅವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಗಳು.