ಡೆಂಗಿ ಪ್ರಕರಣ: ಸೊಳ್ಳೆ ಉತ್ಪತ್ತಿ ತಡೆಯಲು ಸಹಕರಿಸದವರಿಗೆ ದಂಡ ವಿಧಿಸಲು ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್‌ ಸಲಹೆ

ಡೆಂಗಿ ತಡೆಯಲು ಸಾಕಷ್ಟು ಮುಂಜಾಗ್ರತೆ ವಹಿಸಿಲ್ಲ ಎನಿಸುತ್ತದೆ. ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೋಗ ಗುಣಪಡಿಸುವುದಕ್ಕಿಂತ ಮುನ್ನೆಚ್ಚರಿಕೆ ಉತ್ತಮ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌.
Dengue with Karnataka HC
Dengue with Karnataka HC
Published on

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗಿ ಜ್ವರ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬುಧವಾರ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಡೆಂಗಿ ಜ್ವರ ಹೆಚ್ಚಳದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ನಡೆಸಿತು.

ಡೆಂಗಿ ಜ್ವರಕ್ಕೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಲು ಸಹಕರಿಸದವರಿಗೆ ದಂಡ ವಿಧಿಸುವಂತಹ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಪೀಠ ಸಲಹೆ ನೀಡಿದೆ.

ರಾಜ್ಯ ಸರ್ಕಾರ, ಬಿಬಿಎಂಪಿ ಸಲ್ಲಿಸಿದ್ದ ಅಫಿಡವಿಟ್‌ಗಳನ್ನು ಪರಿಶೀಲಿಸಿದ ನ್ಯಾಯಾಲಯವು “ಸರ್ಕಾರ ಮತ್ತು ಬಿಬಿಎಂಪಿ ಡೆಂಗಿ ಜ್ವರಕ್ಕೆ ಚಿಕಿತ್ಸೆ ನೀಡಲು ಎಲ್ಲಾ ಕ್ರಮ ಕೈಗೊಂಡಿದೆ. ಆದರೆ, ಅದನ್ನು ತಡೆಯಲು ಸಾಕಷ್ಟು ಮುಂಜಾಗ್ರತೆ ವಹಿಸಿಲ್ಲ ಎನಿಸುತ್ತದೆ. ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೋಗ ಗುಣಪಡಿಸುವುದಕ್ಕಿಂತ ಮುನ್ನೆಚ್ಚರಿಕೆ ಉತ್ತಮ” ಎಂದು ಅಭಿಪ್ರಾಯಪಟ್ಟಿತು.

ಬೆಂಗಳೂರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುವ 51 ಹಾಟ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ ಎಂಬ ಪಾಲಿಕೆಯ ವಾದ ತಿರಸ್ಕರಿಸಿದ ನ್ಯಾಯಾಲಯವು ಕೇವಲ ಅಷ್ಟು ಹಾಟ್‌ಸ್ಪಾಟ್‌ಗಳಿರಲು ಸಾಧ್ಯವಿಲ್ಲ. ಏಕೆಂದರೆ ಜನವಸತಿ, ವಾಣಿಜ್ಯ ಮತ್ತು ಕಟ್ಟಡ ನಿರ್ಮಾಣ ವಲಯ ಅತಿ ದೊಡ್ಡದಾಗಿದೆ. ಹಾಟ್ ಸ್ಪಾಟ್‌ಗಳಲ್ಲಿ ಸೊಳ್ಳೆಗಳ ಉತ್ಪತ್ತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದವರಿಗೆ ದಂಡ ವಿಧಿಸುವ ಪ್ರಸ್ತಾವ ಇಲ್ಲ. ಸಹಕಾರ ನೀಡದವರಿಗೆ ದಂಡ ವಿಧಿಸುವ ನಿರ್ಧಾರವನ್ನು ಸರ್ಕಾರ ಮಾಡಬೇಕು ಎಂದು ಪೀಠ ಹೇಳಿತು.

ಡೆಂಗಿ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ಅಫಿಡವಿಟ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ನ್ಯಾಯಾಲಯವು “ಬೆಂಗಳೂರು ಮತ್ತು ಇತರೆ ಜಿಲ್ಲೆಗಳಲ್ಲಿ ಸರ್ಕಾರ ಡೆಂಗಿ ನಿಯಂತ್ರಣಕ್ಕೆ ವೈದ್ಯಕೀಯ ಮೂಲಸೌಕರ್ಯ ಒದಗಿಸುವುದು, ಔಷಧ ಪೂರೈಕೆ ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸುವುದನ್ನು ಮುಂದುವರಿಸಬೇಕು” ಎಂದು ಹೇಳಿದೆ.

ಬಿಬಿಎಂಪಿ ಸಲ್ಲಿಸಿರುವ ಅಫಿಡವಿಟ್‌ಗೆ ಆಕ್ಷೇಪಿಸಿದ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ಬಿಬಿಎಂಪಿ 10 ದಿನದಲ್ಲಿ 24 ಲಕ್ಷಕ್ಕೂ ಅಧಿಕ ಮನೆಗಳ ಸಮೀಕ್ಷೆ ನಡೆಸಿರುವುದಾಗಿ ಹೇಳಿದೆ. ಆ ಅಂಕಿ ಅಂಶ ವಾಸ್ತವವಾಗಿಲ್ಲ. ಸಮೀಕ್ಷೆ ನಡೆಸಿರುವ ತಂಡ ಹೈಕೋರ್ಟ್ ಸುತ್ತಮುತ್ತಲ ಪ್ರದೇಶದ ಮನೆಗಳಿಗೆ ಭೇಟಿ ನೀಡಿಲ್ಲ ಮತ್ತು ನಗರದಲ್ಲಿ ಎಲ್ಲೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಲ್ಲ. ಸೊಳ್ಳೆಗಳ ಹಾಟ್ ಸ್ಪಾಟ್‌ಗಳನ್ನು ಗುರುತಿಸಲು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ” ಎಂದರು.

“ಆರೋಗ್ಯ ಇಲಾಖೆ ನಿರ್ದೇಶಕರು ಸಲ್ಲಿಸಿರುವ ವರದಿಯಲ್ಲಿ ಆಗಸ್ಟ್‌ನಲ್ಲಿ ಡೆಂಗಿ ಪ್ರಕರಣ ಇಳಿಕೆಯಾಗಿವೆ. ಮುಂಗಾರು ಮುಗಿಯುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದರು.

Also Read
ಡೆಂಗಿ ಹೆಚ್ಚಳ: ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡು, ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಹಿರಿಯ ವಕೀಲ ಎಸ್ ಶ್ರೀರಂಗ ಅವರು “ದೆಹಲಿ ಮತ್ತು ಇತರೆಡೆ ಡೆಂಗಿ ಜ್ವರ ಪ್ರಕರಣಗಳ ತಡೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ಅಂತಹ ಕ್ರಮಗಳನ್ನು ರಾಜ್ಯದಲ್ಲೂ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಅಡಿ ಈ ಬಗ್ಗೆ ನಿಗಾ ವಹಿಸಲು ವಿಶೇಷ ಅಧಿಕಾರಿ ನಿಯೋಜಿಸಬೇಕು” ಎಂದರು.

ಅಂತಿಮವಾಗಿ ಪೀಠವು ಸರ್ಕಾರ ಮತ್ತು ಬಿಬಿಎಂಪಿ ಡೆಂಗಿ ಜ್ವರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಅಫಿಡವಿಟ್‌ ಸಲ್ಲಿಸುವಂತೆ ಆದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿತು.

Kannada Bar & Bench
kannada.barandbench.com