ಮುಸ್ಲಿಮ್‌ ಮಹಿಳೆಯರ ಅವಹೇಳನ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಜಾಮೀನು ಮಂಜೂರು ಮಾಡಿದ ಶ್ರೀರಂಗಪಟ್ಟಣ ನ್ಯಾಯಾಲಯ

ಪ್ರಭಾಕರ್‌ ಭಟ್‌ ಗಂಭೀರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಡಿಸೆಂಬರ್‌ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
RSS Leader Kalladka Prabhakar Bhat
RSS Leader Kalladka Prabhakar Bhat

ಮುಸ್ಲಿಮ್‌ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಪ್ರಭಾಕರ್‌ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜನವರಿ 10ರಂದು ಕಾಯ್ದಿರಿಸಿದ್ದ ಆದೇಶವನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ ಅವರು ಇಂದು ಪ್ರಕಟಿಸಿದರು.

Judge Gopal Krishna Rai T
Judge Gopal Krishna Rai T

ಅರ್ಜಿದಾರ/ಆರೋಪಿಯು ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯ ತಿರುಚಬಾರದು. ತನಿಖಾಧಿಕಾರಿ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪ್ರಭಾಕರ್‌ ಭಟ್‌ ಗಂಭೀರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಡಿಸೆಂಬರ್‌ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ: ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ನೀಡಿದ್ದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಭಾಕರ್‌ ಭಟ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿದ್ದರು.

Kannada Bar & Bench
kannada.barandbench.com