₹7,093 ಕೋಟಿ ಭಿಕ್ಷುಕರ ಸೆಸ್‌ ಸಂಗ್ರಹವಾದರೂ ರಸ್ತೆಗಳಲ್ಲಿ ಮಕ್ಕಳ ಭಿಕ್ಷಾಟನೆ ಮುಂದುವರಿಕೆ: ಹೈಕೋರ್ಟ್‌ ಕಳವಳ

ನಾಲ್ಕು ವರ್ಷಗಳ ಅವಧಿಯಲ್ಲಿ ಸರ್ಕಾರ ಒಟ್ಟು ₹7,093 ಕೋಟಿ ಸೆಸ್‌ ಸಂಗ್ರಹ ಮಾಡಿದ್ದು, ಅದರಲ್ಲಿ ₹3,453 ಕೋಟಿ ಖರ್ಚು ಮಾಡಲಾಗಿದೆ. ಇನ್ನೂ ಸ್ಥಳೀಯ ಸಂಸ್ಥೆಗಳು ₹3,639 ಕೋಟಿ ವರ್ಗಾಯಿಸಬೇಕಿದೆ ಎಂದ ಅರ್ಜಿದಾರರ ಪರ ವಕೀಲರು.
Karnataka High Court
Karnataka High Court
Published on

ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಿಂದ ಸುಮಾರು ₹7,093 ಕೋಟಿ ಭಿಕ್ಷುಕರ ಸೆಸ್‌ ಸಂಗ್ರಹ ಮಾಡಿದೆ. ಆದರೂ ಸಹ ರಸ್ತೆಗಳಲ್ಲಿ ಮಕ್ಕಳ ಭಿಕ್ಷಾಟನೆ ಮುಂದುವರಿದಿದೆ ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಕಳವಳ ವ್ಯಕ್ತಪಡಿಸಿದೆ.ಇದು ಎಲ್ಲವೂ ಸರಿಯಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಸರ್ಕಾರದ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದೆ.

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಲೆಟ್ಜ್‌ ಕಿಟ್‌ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಪಕ್ಷಕಾರರ ವಾದ ಆಲಿಸಿದ ಪೀಠವು ಸ್ಥಳೀಯ ಸಂಸ್ಥೆಗಳು ಸಂಗ್ರಹ ಮಾಡಿರುವ ಭಿಕ್ಷುಕರ ಸೆಸ್‌ ಅನ್ನು ಸರ್ಕಾರ ವಸೂಲಿ ಮಾಡಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಎರಡು ತಿಂಗಳು ಮುಂದೂಡಿತು.

ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್‌ ಅವರು “ಸರ್ಕಾರವೇ ನೀಡಿರುವ ಮಾಹಿತಿಯಂತೆ 2021-22ರಿಂದ 2024-25ರವರೆಗೆ ನಾಲ್ಕು ವರ್ಷಗಳ ಅವಧಿಯಲ್ಲಿ ಸರ್ಕಾರ ಒಟ್ಟು ₹7,093 ಕೋಟಿ ಸೆಸ್‌ ಸಂಗ್ರಹ ಮಾಡಿದ್ದು, ಅದರಲ್ಲಿ ₹3,453 ಕೋಟಿ ಖರ್ಚು ಮಾಡಲಾಗಿದೆ. ಇನ್ನೂ ಸ್ಥಳೀಯ ಸಂಸ್ಥೆಗಳು ₹3,639 ಕೋಟಿ ವರ್ಗಾಯಿಸಬೇಕಿದೆ. ಸಾವಿರಾರು ಕೋಟಿ ಖರ್ಚಾದರೂ ಮಕ್ಕಳ ಭಿಕ್ಷಾಟನೆ ನಿಂತಿಲ್ಲ” ಎಂದರು.

ಅದಕ್ಕೆ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು “ಭಿಕ್ಷಾಟನೆ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿ, ಸ್ಥಳೀಯ ಸಂಸ್ಥೆಗಳು ಸಂಗ್ರಹ ಮಾಡಿರುವ ಸೆಸ್‌ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುತ್ತಿಲ್ಲ, ಆ ಕುರಿತು ಸ್ಥಳೀಯ ಸಂಸ್ಥೆಗಳಿಗೆ ಜ್ಞಾಪನಾ ಪತ್ರಗಳನ್ನು ಕಳುಹಿಸಲಾಗುತ್ತಿದೆ” ಎಂದರು.

ಅಂತಿಮವಾಗಿ ನ್ಯಾಯಾಲಯವು ಎಷ್ಟು ಸೆಸ್‌ ಸಂಗ್ರಹ ಮಾಡಲಾಗಿದೆ, ಎಷ್ಟು ಖರ್ಚು ಮಾಡಲಾಗಿದೆ ಹಾಗೂ ಬಾಕಿ ಹಣದ ಲೆಕ್ಕ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತು. ಜತೆಗೆ ಸೆಸ್‌ ಸಂಗ್ರಹದ ಕುರಿತು ಎಲ್ಲಾ ಅಂಕಿ ಅಂಶ ಸಂಗ್ರಹಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿತು. ಮಾಹಿತಿ ಸಂಗ್ರಹಕ್ಕೆ ಪ್ರಾಧಿಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ನಿರ್ದೇಶನ ನೀಡಿ  ಎರಡು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರ, ಕೆಎಸ್‌ಎಲ್‌ಎಸ್‌ಎಗೆ ಆದೇಶ ನೀಡಿತು.

Kannada Bar & Bench
kannada.barandbench.com