ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ಗುಹಾರಿಂದ ಅರ್ಜಿ ಸಲ್ಲಿಕೆ

ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋದರೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂಬಂತೆ ಮುಖ್ಯಮಂತ್ರಿಗಳು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
High Court of Karnataka
High Court of Karnataka
Published on

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ‘ (ಎಸ್ಐಆರ್) ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ ಮೇಜರ್ ಜನರಲ್ ಎಸ್ ಜಿ ವಂಬಟ್ಕೆರೆ, ಲೇಖಕಿ ಸಬೀಹಾ ಭೂಮಿಗೌಡ ಈ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯಲ್ಲಿ ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಅನೇಕ ಗೊಂದಲಗಳನ್ನು ಕೂಡಿದೆ. ರಾಜ್ಯ ಸರ್ಕಾರ ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳು ಎತ್ತಿರುವ ಸಮಸ್ಯೆಗಳಿಗೆ ಸಮರ್ಪಕ ಉತ್ತರಗಳು ಸಿಕ್ಕಿಲ್ಲ. ಬಿಎಲ್ಒಗಳಿಗೆ ಸಮರ್ಪಕ ಮಾಹಿತಿ ಹಾಗೂ ತರಬೇತಿ ಇಲ್ಲವಾಗಿದೆ. ತಾರ್ಕಿಕ ವ್ಯತ್ಯಾಸಗಳು (ಲಾಜಿಕಲ್ ಡಿಸ್ಕ್ರಿಪೆನ್ಸಿ) ಇದರ ಬಗ್ಗೆ ಸ್ಪಷ್ಟತೆ ಇಲ್ಲ. ಮತದಾರರ ನೆರವು ಕೇಂದ್ರಗಳು (ಓಟರ್ ಫೆಸಿಲಿಟೇಷನ್ ಸೆಂಟರ್)ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅಲ್ಲದೇ, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋದರೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂಬಂತೆ ಮುಖ್ಯಮಂತ್ರಿಗಳು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ಹಿನ್ನೆಲೆಗಳಲ್ಲಿ ಗಣತಿ ನಮೂನೆಗಳ ವಿತರಣೆಯಿಂದ ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವ ಎಸ್ಐಆರ್‌ನ ಪ್ರತಿ ಹಂತದ ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸಲು, ಪ್ರತಿ ಬೂತ್ ಮಟ್ಟದಲ್ಲಿ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಲು ಚುನಾವಣಾ ಆಯೋಗ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋದವರಿಗೆ ಕಲ್ಯಾಣ ಯೋಜನೆಗಳನ್ನು ನಿಲಿಸಿದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com