

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶಂಕಾಸ್ಪದ ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಎಸ್‌ಐಟಿ ತನಿಖೆ ರದ್ದುಪಡಿಸುವಂತೆ ಕೋರಿ ಉಜಿರೆ ನಿವಾಸಿ ಗಣೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠ ನಡೆಸಿತು.
ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು “ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಅರ್ಜಿದಾರ ಗಣೇಶ್ ಶೆಟ್ಟಿ ಹೆಸರು ಇಲ್ಲ. ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಅವರಿಗೆ ನೋಟಿಸ್ ಸಹ ನೀಡಿಲ್ಲ. ಆದರೂ ಅರ್ಜಿದಾರ ಎಫ್‌ಐಆರ್ ರದ್ದತಿ ಕೋರಿದ್ದಾರೆ. ಇದನ್ನು ಕೇಳಲು ಅರ್ಜಿದಾರರಿಗೆ ಯಾವುದೇ ಹಕ್ಕು ಹಾಗೂ ಅವಕಾಶ ಇಲ್ಲ. ಹೀಗಾಗಿ, ಮಧ್ಯಂತರ ಮನವಿ ಪರಿಗಣಿಸಿ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಬಾರದು” ಎಂದು ಕೋರಿದರು.
ಈ ಮನವಿ ಪರಿಗಣಿಸಿದ ಪೀಠವು ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿತು. ಜೊತೆಗೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸೌಜನ್ಯ ಪರ ಹೋರಾಟಗಾರರದ ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ, ವಿಠಲಗೌಡ ಮತ್ತು ಟಿ ಜಯಂತ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 30ರಂದು ಮೊದಲಿಗೆ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್, ನವೆಂಬರ್ 12ರಂದು ತನಿಖೆಗೆ ಅನುವು ಮಾಡಿಕೊಟ್ಟಿತ್ತು. ಈ ಅರ್ಜಿ ಇನ್ನೂ ವಿಲೇವಾರಿಗೆ ಬಾಕಿಯಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.