ಆದಾಯ ಮೀರಿ ಆಸ್ತಿ ಗಳಿಕೆ: ಶಾಸಕ ಜಮೀರ್‌ ಅಹಮದ್ ಖಾನ್‌ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಲು ಕೋರಿದ್ದರು. ಹಾಗೆಯೇ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆ ನೀಡಲು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು
MLA B Z Zameer Ahmed Khan and Karnataka HC
MLA B Z Zameer Ahmed Khan and Karnataka HC

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಚಾಮರಾಜಪೇಟೆ ಶಾಸಕ ಬಿ ಝಡ್ ಜಮೀರ್ ಅಹಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹಮದ್ ಖಾನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಏಕಸದಸ್ಯ ಪೀಠವು ಮೇಲಿನ ಆದೇಶ ಮಾಡಿದೆ. ವಿಸ್ತೃತ ಆದೇಶವು ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಕರಣದ ಹಿನ್ನೆಲೆ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇನಲ್ಲಿ ಎಫ್‌ಐಆರ್ ದಾಖಲಿಸಿತ್ತು. ಶಾಸಕರು ಆದಾಯ ಮೀರಿ 87 ಕೋಟಿ ರೂಪಾಯಿ ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿತ್ತು.

ಇದರಿಂದ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್ ಅಹಮದ್, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದರು. ಹಾಗೆಯೇ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿತ್ತು.ಇದರಿಂದ ಎಸಿಬಿ ದಾಖಲಿಸಿದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ.

ಅರ್ಜಿ ವಿಚಾರಣೆ ವೇಳೆ ಜಮೀರ್ ಪರ ವಕೀಲರು, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ, ತನಿಖೆ ಕೈಗೊಂಡಿದೆ. ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದ, ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದ್ದರು.

Also Read
ಆದಾಯ ಮೀರಿದ ಆಸ್ತಿ ಗಳಿಕೆ: ಎಫ್‌ಐಆರ್‌ ರದ್ದತಿ ಕೋರಿರುವ ಶಾಸಕ ಜಮೀರ್‌ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನು ಇಲ್ಲ. ಹೀಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದ್ದು, ತಡೆ ನೀಡಬಾರದು ಎಂದು ವಾದಿಸಿದ್ದರು.

Related Stories

No stories found.
Kannada Bar & Bench
kannada.barandbench.com