ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಏಪ್ರಿಲ್ 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕೆಲ ಕಾಲ ಡಿ ಕೆ ಶಿವಕುಮಾರ್‌, ಸಿಬಿಐ ಮತ್ತು ಯತ್ನಾಳ್‌ ಪರ ವಕೀಲರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿತು. ಅಂದಿನಿಂದ ಅರ್ಜಿ ಸಂಬಂಧ ಅಂತಿಮ ವಾದ-ಪ್ರತಿವಾದ ಆಲಿಸಲಾಗುವುದು ಎಂದು ಪೀಠ ತಿಳಿಸಿದೆ.
D K Shivakumar, CBI and Karnataka HC
D K Shivakumar, CBI and Karnataka HC
Published on

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 5ರಿಂದ ನಡೆಸುವುದಾಗಿ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತಿಳಿಸಿದೆ.

ರಾಜ್ಯ ಸರ್ಕಾರವು ಅನುಮತಿ ಹಿಂಪಡೆದಿರುವ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್‌ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಕೆಲ ಕಾಲ ಡಿ ಕೆ ಶಿವಕುಮಾರ್‌, ಸಿಬಿಐ ಮತ್ತು ಯತ್ನಾಳ್‌ ಪರ ವಕೀಲರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿತು. ಅಂದಿನಿಂದ ಅರ್ಜಿ ಸಂಬಂಧ ಅಂತಿಮ ವಾದ-ಪ್ರತಿವಾದ ಆಲಿಸಲಾಗುವುದು ಎಂದು ಪೀಠ ತಿಳಿಸಿದೆ.

ಇದಕ್ಕೂ ಮುನ್ನ, ಪ್ರಕರಣ ಸಂಬಂಧ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಬೆಳವಣಿಗೆಗಳು ನಡೆದಿವೆ. ಆ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಲಾಗುವುದು ಎಂದು ಡಿ ಕೆ ಶಿವಕುಮಾರ್ ಪರ ವಕೀಲರು ಪೀಠಕ್ಕೆ ತಿಳಿಸಿದರು.

Also Read
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆತ: ಆಕ್ಷೇಪಣೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಮಾರ್ಚ್‌ 22ಕ್ಕೆ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಆದೇಶಿಸಿತ್ತು. ಅದರ ರದ್ದತಿಗೆ ಕೋರಿ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು 2023ರ ಏಪ್ರಿಲ್‌ 20ರಂದು ಹೈಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಿವಕುಮಾರ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. ಈ ಮಧ್ಯೆ ಹಾಲಿ ಕಾಂಗ್ರೆಸ್‌ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನವೆಂಬರ್‌ 28ರಂದು ಹಿಂಪಡೆದಿತ್ತು. ಜೊತೆಗೆ, ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Kannada Bar & Bench
kannada.barandbench.com