ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ಯಾವ ಪೀಠ ವಿಚಾರಣೆ ನಡೆಸಬೇಕು ಎಂಬುದರ ಕುರಿತು ನಿರ್ದೇಶನ ಪಡೆಯಲು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಲು ರಿಜಿಸ್ಟ್ರಿಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಆದೇಶಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವಂತೆ ಸಿಬಿಐ ಪರ ವಕೀಲರಾದ ಪಿ ಪ್ರಸನ್ನ ಕುಮಾರ್ ಅವರು ಮೆಮೊ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಬೇರೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣವನ್ನು ಭಾಗಶಃ ಆಲಿಸಿದ್ದಾರೆ. ಹೀಗಾಗಿ, ಈ ಸಂಬಂಧ ಸೂಕ್ತ ನಿರ್ದೇಶನ ಪಡೆಯಲು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ರಿಜಿಸ್ಟ್ರಿ ಮಂಡಿಸಬೇಕು ಎಂದು ಆದೇಶಿಸಿತು. ಅಲ್ಲದೇ, ಮಧ್ಯಂತರ ತಡೆ ಮುಂದುವರಿಯಲಿದೆ ಎಂದು ಆದೇಶಿಸಿದೆ.
ಇದಕ್ಕೂ ಮುನ್ನ, ಮೇ 22ರಂದು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಪೀಠದ ಮುಂದೆ ಮೆಮೊ ಸಲ್ಲಿಸಿದ್ದ ವಕೀಲ ಪ್ರಸನ್ನ ಕುಮಾರ್ ಅವರು ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಕೋರಿದ್ದರು. ಇದಕ್ಕೆ ನ್ಯಾ. ನಟರಾಜನ್ ಅವರು ವಿಶೇಷ ನ್ಯಾಯಾಲಯದ ರೋಸ್ಟರ್ ಬದಲಾಗಿದ್ದು, ಸಂಬಂಧಿತ ಪೀಠದ ಮುಂದೆ ಮೆಮೊ ಸಲ್ಲಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾ. ನಾಗಪ್ರಸನ್ನ ಅವರ ನೇತೃತ್ವದ ಪೀಠದ ಮುಂದೆ ಮೆಮೊ ಸಲ್ಲಿಸಲಾಗಿತ್ತು.
ಡಿ ಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ 2023ರ ಫೆಬ್ರವರಿಯಲ್ಲಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದನ್ನು ಪ್ರಶ್ನಿಸಿ, ಮಧ್ಯಂತರ ತಡೆ ತೆರವು ಮಾಡುವಂತೆ ಕೋರಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ಶಿವಕುಮಾರ್ ಅವರ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಶೀಘ್ರದಲ್ಲೇ ಪ್ರಕರಣವು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಹೀಗಾಗಿ, ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದ್ದರು. ಇದನ್ನು ಆಲಿಸಿದ್ದ ಸರ್ವೋಚ್ಚ ನ್ಯಾಯಾಲಯವು ಪ್ರಕರಣವನ್ನು ಜುಲೈಗೆ ಮುಂದೂಡಿತ್ತು.
ಆನಂತರ ಸಿಬಿಐ ಪರವಾಗಿ ಪ್ರಸನ್ನ ಕುಮಾರ್ ಅವರು ಪ್ರಕರಣ ವಿಚಾರಣೆಗೆ ಪಟ್ಟಿ ಮಾಡಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಡಿ ಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.