ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್ ವಿರುದ್ಧ ಜುಲೈ 30ಕ್ಕೆ ತೀರ್ಪು ಪ್ರಕಟಿಸಲಿರುವ ವಿಶೇಷ ನ್ಯಾಯಾಲಯ

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಸೈಬರ್‌ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) & ಐಟಿ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.
Prajwal Revanna
Prajwal Revanna
Published on

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸದಾಕೆಯ ದೂರಿನ ಅನ್ವಯ ಬೆಂಗಳೂರಿನ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ಕ್ಕೆ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣ ಮತ್ತು ಸಿಐಡಿಯ ಎಸ್‌ಐಟಿ ಪೊಲೀಸರ ಪರ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದ ಆಲಿಸಿ ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ತೀರ್ಪು ಕಾಯ್ದಿರಿಸಿದರು.

Santhosh Gajanan Bhat Judge, MP/MLA Special Court
Santhosh Gajanan Bhat Judge, MP/MLA Special Court

ಇದಕ್ಕೂ ಮುನ್ನ ವಿಚಾರಣೆಗೆ ಪೊಲೀಸರು ಬಾಡಿ ವಾರೆಂಟ್‌ ಮೇಲೆ ಪ್ರಜ್ವಲ್‌ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಸಿಐಡಿಯ ಎಸ್‌ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ತಮ್ಮ ವಾದ ಮತ್ತು ಅದನ್ನು ಬೆಂಬಲಿಸುವ ಕೆಲ ತೀರ್ಪುಗಳಿಗೆ ಸಂಬಂಧಿಸಿದ ಲಿಖಿತ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದೇ ವೇಳೆ ಪ್ರಜ್ವಲ್‌ ರೇವಣ್ಣ ಪರ ವಕೀಲ ಜಿ ಅರುಣ್‌ ಸಹ ತಮ್ಮ ವಾದ ಹಾಗೂ ಇನ್ನಿತರ ದಾಖಲೆಗಳನ್ನು ಸಲ್ಲಿಸಿದರು. ಅವುಗಳನ್ನು ದಾಖಲಿಸಿಕೊಂಡ ನ್ಯಾಯಾಲಯವು ವಿಚಾರಣೆ ಪೂರ್ಣಗೊಂಡಿದ್ದು, ಜುಲೈ 30ರಂದು ಪ್ರಕರಣದ ಕುರಿತ ಅಂತಿಮ ತೀರ್ಪು ಪ್ರಕಟಿಸುವುದಾಗಿ ತಿಳಿಸಿತು.

ಅಲ್ಲದೇ, ಹೊಸದಾಗಿ ಬಾಡಿ ವಾರೆಂಟ್‌ ಜಾರಿಗೊಳಿಸಿ ಪ್ರಜ್ವಲ್‌ ರೇವಣ್ಣ ಅವರನ್ನು ಜುಲೈ 30ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚಿಸಿತು.

ಮೈಸೂರಿನ ಕೆ ಆರ್‌ ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್‌ ಅಪರಾಧ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷದ ಅಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಜ್ವಲ್‌ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್‌ ಹೌಸ್‌ ಮತ್ತು ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಿದ್ದರು.

ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಮರಳುತ್ತಿದ್ದಂತೆ 2024ರ ಮೇ 21ರಂದು ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಪ್ರಜ್ವಲ್‌ ವಿರುದ್ದ ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಕೋರಿದ್ದ ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿವೆ. ಈ ನಡುವೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್‌ ಸಲ್ಲಿಸಿರುವ ಅರ್ಜಿಯು ವಿಚಾರಣಾಧೀನ ನ್ಯಾಯಾಲಯದಲ್ಲಿ ಬಾಕಿ ಇದೆ.

Kannada Bar & Bench
kannada.barandbench.com