
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತ ನೆಕ್ಕಂಟಿ ನಾಗರಾಜ್‌ಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯವು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಈ ಸಂಬಂಧ ನೆಕ್ಕಂಟಿ ನಾಗರಾಜ್‌ಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಇ ಡಿ ಪರ ವಕೀಲರ ವಾದ ಆಲಿಸಿದ ಪೀಠವು ನೆಕ್ಕಂಟಿ ನಾಗರಾಜ್‌ಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.
ನೆಕ್ಕಂಟಿ ನಾಗರಾಜ್‌ಗೆ ಜಾಮೀನು ಮಂಜೂರು ಮಾಡುವಾಗ ವಿಚಾರಣಾಧೀನ ನ್ಯಾಯಾಲಯ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡದೇ ಜಾಮೀನು ಮಂಜೂರು ಮಾಡಿದೆ. ಆದ್ದರಿಂದ, 2024ರ ನವೆಂಬರ್ 8ರಂದು ವಿಚಾರಣಾಧೀನ ನ್ಯಾಯಾಲಯ ನೆಕ್ಕಂಟಿ ನಾಗರಾಜ್‌ಗೆ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು ಎಂದು ಜಾರಿ ನಿರ್ದೇಶನಾಲಯ ಕೋರಿದೆ.
ಮಾಜಿ ಸಚಿವ ಬಿ ನಾಗೇಂದ್ರ, ಇನ್ನೊಬ್ಬ ಆರೋಪಿ ಇಟಕಾರಿ ಸತ್ಯನಾರಾಯಣಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ರದ್ದುಪಡಿಸುವಂತೆ ಇ ಡಿ ಹೈಕೋರ್ಟ್‌ಗೆ ಮನವಿ ಮಾಡಿದೆ. ಅವುಗಳು ವಿಚಾರಣೆಗೆ ಬಾಕಿ ಇವೆ.