ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ʼಬಿʼ ವರದಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಇ ಡಿ

ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಹ ಬಿ ವರದಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಹೈಕೋರ್ಟ್‌ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ʼಬಿʼ ವರದಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಇ ಡಿ
Published on

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು, ಆ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಸಂಬಂಧ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕಟುಂಬ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ ʼಬಿʼ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಯಾಗಿದೆ.

Also Read
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ 'ಬಿ' ರಿಪೋರ್ಟ್‌ ಒಪ್ಪಿದ ವಿಶೇಷ ನ್ಯಾಯಾಲಯ

ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಹೀಗಾಗಿ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಸಲ್ಲಿಸಿರುವ ಬಿ ರಿಪೋರ್ಟ್‌ ಅನ್ನು ಪಡೆದು ಪರಿಶೀಲಿಸಬೇಕು. ಬಿ ರಿಪೋರ್ಟ್‌ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೇ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಅರ್ಜಿಯಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ, ವಿವಾದಿತ ಜಮೀನಿನ ಮೂಲ ಮಾಲೀಕ ಜೆ ದೇವರಾಜು, ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್‌ ಕುಮಾರ್‌ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Kannada Bar & Bench
kannada.barandbench.com