ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ನೀಡಿದ ಮಧ್ಯಂತರ ತಡೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ನವೆಂಬರ್ 5ರವರೆಗೆ ವಿಸ್ತರಿಸಿದೆ.
ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ದೂರುದಾರರ ಪರ ಹಾಜರಿದ್ದ ವಕೀಲರು “ಹಿರಿಯ ವಕೀಲ ಪ್ರಶಾಂತ್ ಭೂಷಣ್ ಲಭ್ಯವಿಲ್ಲದ ಕಾರಣ ಇನ್ನಷ್ಟು ಕಾಲಾವಕಾಶ ನೀಡಬೇಕು” ಎಂದು ಪೀಠಕ್ಕೆ ಕೋರಿದರು. ಇದನ್ನು ಪುರಸ್ಕರಿಸಿದ ಪೀಠ ತಡೆ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು.
ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ್ ಆರ್.ಐಯ್ಯರ್ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ವಿಶೇಷ ವಿಚಾರಣಾ ನ್ಯಾಯಾಲಯವು ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು.
ಇದರನ್ವಯ ದೂರಿನಲ್ಲಿ ಆರೋಪಿಗಳಾಗಿ ಹೆಸರಿಸಲಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಪದಾಧಿಕಾರಿಗಳ ವಿರುದ್ಧ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.