ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಕೇಂದ್ರ ಸಚಿವರಾದ ನಿರ್ಮಲಾ, ನಡ್ಡಾ ವಿರುದ್ಧದ ಎಫ್‌ಐಆರ್‌ ರದ್ದು

ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರಾಗಿರುವ ಆದರ್ಶ್‌ ಆರ್‌. ಐಯ್ಯರ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿ ಎಫ್‌ಐಆರ್‌ ದಾಖಲಿಸಲು ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿತ್ತು.
ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಕೇಂದ್ರ ಸಚಿವರಾದ ನಿರ್ಮಲಾ, ನಡ್ಡಾ ವಿರುದ್ಧದ ಎಫ್‌ಐಆರ್‌ ರದ್ದು
Published on

ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಜೆ ಪಿ ನಡ್ಡಾ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ರದ್ದುಪಡಿಸಿದೆ.

ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ಹಾಗೂ ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅರ್ಜಿದಾರ ಆದರ್ಶ್‌ ಐಯ್ಯರ್‌ ಪ್ರತಿನಿಧಿಸಿದ್ದ ವಕೀಲ ಪ್ರಶಾಂತ್‌ ಭೂಷಣ್‌ ಅವರು “ದೂರಿನಲ್ಲಿನ ಆರೋಪವು ಸುಲಿಗೆಗೆ ಕ್ಲಾಸಿಕ್‌ ಉದಾಹರಣೆಯಾಗಿದೆ. ಸುಲಿಗೆಗೆ ಗುರಿಯಾಗಿರುವ ವ್ಯಕ್ತಿಯೂ ಅಪರಾಧದಿಂದ ಲಾಭ ಪಡೆದಿದ್ದಾರೆ. ಬಿಜೆಪಿಗೆ ಚುನಾವಣಾ ಬಾಂಡ್‌ ಮೂಲಕ ದೇಣಿಗೆ ನೀಡಿದ ಬಳಿಕ ಅವರ ವಿರುದ್ಧ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ತನಿಖೆ ನಿಲ್ಲಿಸಲಾಗಿದೆ. ಈ ಕಾರಣಕ್ಕಾಗಿ ಅವರು ದೂರು ನೀಡಿಲ್ಲ. ಸಾಮಾನ್ಯ ಜನರೇ ಈ ಸಂಬಂಧ ದೂರು ನೀಡಬಹುದು” ಎಂದು ಸಮರ್ಥಿಸಿದ್ದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಜಿ ರಾಘವನ್‌ ಅವರು “ಐಪಿಸಿ ಸೆಕ್ಷನ್‌ 384ರ ವ್ಯಾಖ್ಯಾನವು ಪ್ರತಿಯೊಂದು ಪ್ರಕರಣದ ವಾಸ್ತವಿಕ ವಿಚಾರದ ಮೇಲೆ ಬದಲಾಗುವುದಿಲ್ಲ. ಸಂತ್ರಸ್ತರು ನ್ಯಾಯಾಲಯದ ಮುಂದೆ ಬಂದಿಲ್ಲ, ಈ ಪ್ರಕರಣದಲ್ಲಿನ ದೂರುದಾರರಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಇಲ್ಲಿ ಸುಲಿಗೆ ವಿಚಾರ ಅನ್ವಯಿಸುವುದಿಲ್ಲ. ರಂಜನೆಗಾಗಿ ಪ್ರಕರಣವನ್ನು ಪರಿಗಣಿಸಲಾಗದು” ಎಂದಿದ್ದರು.

Also Read
ಕೇಂದ್ರ ಸಚಿವೆ ನಿರ್ಮಲಾ, ನಡ್ಡಾ ವಿರುದ್ಧದ ಚುನಾವಣಾ ಬಾಂಡ್‌ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರಾಗಿರುವ ಆದರ್ಶ್‌ ಆರ್‌. ಐಯ್ಯರ್‌ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜೆ ಪಿ ನಡ್ಡಾ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 384 (ಸುಲಿಗೆ), 120ಬಿ (ಕ್ರಿಮಿನಲ್‌ ಪಿತೂರಿ) ಜೊತೆಗೆ 34ರ ಅಡಿ ಪ್ರಕರಣ ದಾಖಲಿಸಲು ತಿಲಕ್‌ ನಗರ ಪೊಲೀಸರಿಗೆ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿತ್ತು. ಇದರ ಅನ್ವಯ ಎಫ್‌ಐಆರ್‌ ದಾಖಲಾಗಿತ್ತು.

Kannada Bar & Bench
kannada.barandbench.com