ಚುನಾವಣೆ ವಿಳಂಬ: ನಗರ ಸ್ಥಳೀಯ ಸಂಸ್ಥೆ ಮೀಸಲಾತಿ ನಿಗದಿ ಪ್ರಕ್ರಿಯೆ ಚುರುಕುಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಕಾಲಮಿತಿಯೊಳಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಯೋಗ ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲೇರಿದೆ ಎಂದ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಫಣೀಂದ್ರ.
Election Vote
Election Vote
Published on

ಅವಧಿ ಮುಗಿದು ಚುನಾವಣೆ ನಡೆಯಬೇಕಿರುವ ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿ ಪ್ರಕ್ರಿಯೆಗೆ ಚುರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು, ಕಾಲಮಿತಿಯೊಳಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಯೋಗ ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲೇರಿದೆ. ನಗರ ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ವಿಚಾರವಾಗಿ ಆಯೋಗ ಈಗಾಗಲೇ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅದನ್ನು ಹೊರತುಪಡಿಸಿ ಈ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ಶಿವಮೊಗ್ಗ, ಮೈಸೂರು ಮಹಾನಗರ ಪಾಲಿಕೆ ಅವಧಿ 2023ರಲ್ಲಿ, ತುಮಕೂರು ಮಹಾನಗರ ಪಾಲಿಕೆ ಅವಧಿ 2024ರಲ್ಲಿ ದಾವಣಗೆರೆ, ಮಂಗಳೂರು ಮಹಾನಗರ ಪಾಲಿಕೆಗಳ ಅವಧಿ 2025ರಲ್ಲಿ ಕೊನೆಗೊಂಡಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

Also Read
[ನಗರ ಸ್ಥಳೀಯ ಸಂಸ್ಥೆ ಚುನಾವಣೆ] ಸರ್ಕಾರದ ಕ್ರಮದ ಬಗ್ಗೆ ಪ್ರತಿವಾರ ಮೇಲ್ವಿಚಾರಣೆ: ಹೈಕೋರ್ಟ್‌

ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪೂರ ಅವರು ಮೆಮೊ ಸಲ್ಲಿಸಿ, ಚುನಾವಣೆ ನಡೆಯಬೇಕಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿ ನಿಗದಿಪ್ರಕ್ರಿಯೆ ಚಾಲ್ತಿಯಲ್ಲಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ 56 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿರುವ ಪರಿಣಾಮ ಹೊಸ ಮಹಾನಗರ ಪಾಲಿಕೆಗೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ನಡೆದಿದೆ. ಜೂನ್‌ವರೆಗೆ ಕಾಲಾವಕಾಶ ನೀಡಿದರೆ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.

ವಾದ-ಪ್ರತಿವಾದ ಆಲಿಸಿದ ಪೀಠವು ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ತುರ್ತಾಗಿ ನಡೆಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿತು.

Kannada Bar & Bench
kannada.barandbench.com