ಗ್ಯಾರಂಟಿ ಯೋಜನೆಗಳು ಆಮಿಷಕ್ಕೆ ಸಮ, ಚುನಾವಣಾ ಅಕ್ರಮ: ಸಿದ್ದರಾಮಯ್ಯ ಅನರ್ಹತೆ ಕೋರಿ ಹೈಕೋರ್ಟ್‌ನಲ್ಲಿ ಪ್ರಕರಣ

ಗ್ಯಾರಂಟಿ ಯೋಜನೆ ಘೋಷಿಸಿ ಮತ ಪಡೆದಿರುವುದು ಅಕ್ರಮ. ಕಾನೂನಿನಲ್ಲಿ ಎಲ್ಲರನ್ನೂ ಪ್ರತಿವಾದಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಅವರನ್ನು ಮಾತ್ರ ಪ್ರತಿವಾದಿಯನ್ನಾಗಿ ಮಾಡಲಾಗಿದೆ ಎಂದು ವಿವರಿಸಿದ ಹಿರಿಯ ವಕೀಲೆ ನೇಸರ್ಗಿ.
CM Siddaramaiah and Karnataka HC
CM Siddaramaiah and Karnataka HC

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರನ್ನು ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅನರ್ಹಗೊಳಿಸಬೇಕು ಎಂದು ಕೋರಿರುವ ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಅರ್ಜಿದಾರರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ ಅವರು ಸಲ್ಲಿಸಿರುವ ಚುನಾವಣಾ ಅರ್ಜಿಯು ಇಂದು ನ್ಯಾಯಮೂರ್ತಿ ಎಸ್‌ ಸುನಿಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರನ್ನು ಕುರಿತು ಪೀಠವು ಕಚೇರಿಯು ಕೆಲವೊಂದು ಆಕ್ಷೇಪಣೆಗಳನ್ನು ಎತ್ತಿದೆ. ಅವುಗಳನ್ನು ಸರಿಪಡಿಸಿ, ಜುಲೈ 28ಕ್ಕೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದಿತು.

“ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್‌ 123 (1) ಪ್ರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ. ಸೆಕ್ಷನ್‌ 123 (2) ಪ್ರಕಾರ ಇದು ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್‌ 123 (4)ರ ಪ್ರಕಾರ ಅದನ್ನು ಪ್ರಚಾರ ಮಾಡುವುದೂ ಅಪರಾಧ. ಅಲ್ಲದೇ, ಇದನ್ನು ಅಭ್ಯರ್ಥಿಯ ಚುನಾವಣಾ ಲೆಕ್ಕಕ್ಕೆ ಸೇರ್ಪಡೆ ಮಾಡದಿರುವುದು ಸೆಕ್ಷನ್‌ 123 (6)ರ ಅಪರಾಧವಾಗಿದೆ” ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ ಎಂದು ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ “ಬಾರ್‌ ಅಂಡ್‌ ಬೆಂಚ್‌”ಗೆ ತಿಳಿಸಿದರು.

“ಪ್ರಣಾಳಿಕೆ ಸಿದ್ಧಪಡಿಸಿದವರು, ಅದನ್ನು ಬಳಸಿ ಮತ ಕೇಳಿದ ಎಲ್ಲರ ಆಯ್ಕೆಯೂ ಅಸಿಂಧು ಆಗಬೇಕಾಗುತ್ತದೆ. ಆದರೆ, ಕಾನೂನಿನಲ್ಲಿ ಎಲ್ಲರನ್ನೂ ಪ್ರತಿವಾದಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಅವರನ್ನು ಮಾತ್ರ ಪ್ರತಿವಾದಿಯನ್ನಾಗಿ ಮಾಡಲಾಗಿದೆ” ಎಂದು ಪ್ರಮೀಳಾ ನೇಸರ್ಗಿ ವಿವರಿಸಿದರು.

Related Stories

No stories found.
Kannada Bar & Bench
kannada.barandbench.com