ಚುನಾವಣಾ ಅಕ್ರಮ ಪ್ರಕರಣ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸದಸ್ಯತ್ವ ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌

ಪ್ರಜ್ವಲ್‌ ಅವರು ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದರಿಂದ ತನ್ನನ್ನು ವಿಜೇತ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಎ ಮಂಜು ಕೋರಿಕೆಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.
Karnataka HC and Prajwal Revanna
Karnataka HC and Prajwal Revanna
Published on

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರ ಮೊಮ್ಮಗ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ಮಾಡಿದೆ.

ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಹಾಲಿ ಜೆಡಿಎಸ್‌ ಶಾಸಕರಾಗಿರುವ ಎ ಮಂಜು ಹಾಗೂ ಜಿ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ. ಪ್ರಜ್ವಲ್‌ ಅವರು ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದರಿಂದ ತನ್ನನ್ನು ವಿಜೇತ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಎ ಮಂಜು ಅವರ ಕೋರಿಕೆಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.

ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌ ಡಿ ರೇವಣ್ಣ ಮತ್ತು ಅವರ ಸಹೋದರ ಹಾಗೂ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ, ಎ ಮಂಜು ಅವರಿಗೆ ನೋಟಿಸ್‌ ಜಾರಿ ಮಾಡಲು ರಿಜಿಸ್ಟ್ರಿಗೆ ನ್ಯಾಯಾಲಯ ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Also Read
ಚುನಾವಣಾ ಅಕ್ರಮ ಪ್ರಕರಣ: ಸಂಸದ ಪ್ರಜ್ವಲ್‌ ರೇವಣ್ಣ ನಡೆಗೆ ಹೈಕೋರ್ಟ್‌ ಅಸಮಾಧಾನ

ಪ್ರಕರಣದ ಹಿನ್ನೆಲೆ: ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್‌ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಆಗ ಬಿಜೆಪಿಯಲ್ಲಿದ್ದ ಪರಾಜಿತ ಅಭ್ಯರ್ಥಿ ಎ. ಮಂಜು ದೂರು ಸಲ್ಲಿಸಿದ್ದರು. ಆದರೆ ಜ. 17ರಂದು ರಾಜ್ಯ ಹೈಕೋರ್ಟ್‌ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ʼಅರ್ಜಿ ದೋಷಪೂರಿತವಾಗಿದೆ. ಇದರಲ್ಲಿನ ಲೋಪಗಳನ್ನು ಸರಿಪಡಿಸಲು ಕಾಲಾವಕಾಶ ನೀಡಿದ ನಂತರವೂ ಕಾಲಮಿತಿಯಲ್ಲಿ ಅವುಗಳನ್ನು ಸರಿಪಡಿಸಿಲ್ಲʼ ಎಂದು ಹೇಳಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಂಜು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Kannada Bar & Bench
kannada.barandbench.com