ವಕ್ಫ್‌ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಸರ್ಕಾರದ ಅಧಿಸೂಚನೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಹೈಕೋರ್ಟ್ ಈ ಆದೇಶದಿಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟಿಸಲು ಇದ್ದ ಕಾನೂನು ಅಡ್ಡಿ ದೂರವಾದಂತಾಗಿದೆ.
Karnataka High Court
Karnataka High Court

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ನಿವಾಸಿ ಅಬ್ದುಲ್ ಜಬ್ಬಾರ್ ಕಲಬುರಗಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಪೀಠವು ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನದ ಚುನಾವಣೆಯ ಅಧಿಸೂಚನೆ ರದ್ದುಪಡಿಸಬೇಕು ಎಂಬ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿ, ಅರ್ಜಿಯನ್ನು ವಜಾಗೊಳಿಸಿತು. ಇದೇ ವೇಳೆ 2020ರಿಂದ ಖಾಲಿ ಇರುವ ವಕ್ಫ್ ಮಂಡಳಿಯ ಮುತವಲ್ಲಿ ಕೋಟಾದ ಒಂದು ಸದಸ್ಯ ಸ್ಥಾನವನ್ನು ಭರ್ತಿ ಮಾಡುವಂತೆ ಅರ್ಜಿದಾರರು ಆಗಸ್ಟ್ 8ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಹೈಕೋರ್ಟ್ ಈ ಆದೇಶದಿಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟಿಸಲು ಇದ್ದ ಕಾನೂನು ಅಡ್ಡಿ ದೂರವಾದಂತಾಗಿದೆ. ಚುನಾವಣೆ ನಡೆಸಬಹುದು, ಆದರೆ, ಫಲಿತಾಂಶ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್ ಸೆಪ್ಟೆಂಬರ್‌ 1ರಂದು ಆದೇಶ ನೀಡಿತ್ತು. ನಿಗದಿಯಂತೆ ಸೋಮವಾರ (ಸೆ.4) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆದರೆ, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಿಸಿರಲಿಲ್ಲ.

ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಾದರೆ ಪೂರ್ಣ ಪ್ರಮಾಣದಲ್ಲಿ ಮಂಡಳಿ ರಚನೆಯಾಗಬೇಕು. ಆದರೆ, ಮುತವಲ್ಲಿ ಕೋಟಾದ ಒಂದು ಸದಸ್ಯ ಸ್ಥಾನ 2020ರ ಆಗಸ್ಟ್‌ 8ರಿಂದ ಖಾಲಿ ಇದೆ. ಹೀಗಿದ್ದಾಗ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಆದ್ದರಿಂದ, ಖಾಲಿ ಇರುವ ಒಂದು ಸ್ಥಾನ ಭರ್ತಿ ಮಾಡಬೇಕು ಎಂದು ಆಗಸ್ಟ್‌ 8ರಂದು ಮನವಿ ಸಲ್ಲಿಸಲಾಗಿದೆ. ಸರ್ಕಾರ ಅದನ್ನು ಪರಿಗಣಿಸಿಲ್ಲ. ಆದ್ದರಿಂದ, ಅಧ್ಯಕ್ಷ ಸ್ಥಾನದ ಚುನಾವಣೆಗೆ ಸರ್ಕಾರ ಆಗಸ್ಟ್‌ 23ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ಅಲ್ಲದೇ, ಮುತವಲ್ಲಿ ಕೋಟಾದ ಖಾಲಿ ಇರುವ ಒಂದು ಸದಸ್ಯ ಸ್ಥಾನವನ್ನು ತುಂಬಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು. ಅರ್ಜಿದಾರರ ಪರ ಹಿರಿಯ ವಕೀಲೆ ಎಸ್ ಸುಶೀಲಾ ವಾದ ಮಂಡಿಸಿದರು.

ವಕ್ಫ್ ಮಂಡಳಿಯ ಸದಸ್ಯರು ಮಾತ್ರ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಆದರೆ, ಅರ್ಜಿದಾರರು ವಕ್ಫ್ ಮಂಡಳಿಯ ಸದಸ್ಯರಲ್ಲ. ಹೀಗಾಗಿ ಅವರು ಅರ್ಜಿ ಸಲ್ಲಿಸುವ ಹಕ್ಕು ಹೊಂದಿಲ್ಲ. ಅಷ್ಟಕ್ಕೂ 2020ರಿಂದ ಮುತವಲ್ಲಿ ಕೋಟಾದ ಒಂದು ಸದಸ್ಯ ಸ್ಥಾನ ಖಾಲಿ ಇದ್ದರೂ, ಆ ವಿಚಾರವನ್ನು ಈಗ ಎತ್ತಿರುವ ಅರ್ಜಿದಾರರು ಆಗಸ್ಟ್‌ 8ರಂದಷ್ಟೇ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಅರ್ಜಿ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಸರ್ಕಾರ ಮತ್ತು ವಕ್ಫ್ ಮಂಡಳಿ ವಾದಿಸಿತ್ತು. ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಅಡ್ವೋಕೇಟ್ ಜನರಲ್ ಶೇಖ್ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದ್ದರು. ವಕ್ಫ್ ಮಂಡಳಿ ಪರ ವಕೀಲೆ ಎಸ್ ಆರ್ ಅನುರಾಧಾ ವಾದ ಮಂಡಿಸಿದ್ದರು.

Related Stories

No stories found.
Kannada Bar & Bench
kannada.barandbench.com