[ಒಕ್ಕಲಿಗರ ಸಂಘದ ಚುನಾವಣೆ] ಮತದಾರರ ಪಟ್ಟಿ ಪರಿಷ್ಕರಿಸಲಾಗಿಲ್ಲ ಎಂಬ ಮನವಿ ವಜಾ ಮಾಡಿದ ಹೈಕೋರ್ಟ್‌

ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಹೀಗಾಗಿ, ನಿಯಮದಂತೆ ಮತದಾರರ ಪಟ್ಟಿ ಪ್ರಕಟಿಸಲಾಗಿಲ್ಲ ಎಂಬ ವಾದ ಒಪ್ಪಲಾಗದು ಎಂದು ಪೀಠ ಹೇಳಿದೆ.
[ಒಕ್ಕಲಿಗರ ಸಂಘದ ಚುನಾವಣೆ] ಮತದಾರರ ಪಟ್ಟಿ ಪರಿಷ್ಕರಿಸಲಾಗಿಲ್ಲ ಎಂಬ ಮನವಿ ವಜಾ ಮಾಡಿದ ಹೈಕೋರ್ಟ್‌

ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗಿಲ್ಲ ಎಂದು ಆಕ್ಷೇಪಿಸಿ ರಾಜ್ಯ ಒಕ್ಕಲಿಗರ ಸಂಘಕ್ಕೆ ನಿಗದಿಯಂತೆ ಚುನಾವಣೆ ನಡೆಸಲು ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ರಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ವೇಳಾಪಟ್ಟಿಯಂತೆ ಡಿಸೆಂಬರ್‌ 12ರಂದು ಚುನಾವಣೆ ನಡೆಸಲು ಏಕಸದಸ್ಯ ಪೀಠ ಆದೇಶಿಸಿತ್ತು.

ಮತದಾರರ ಪಟ್ಟಿಯನ್ನು ಸಂಘದ ಬೈಲಾದ ಪ್ರಕಾರ ತಯಾರಿಸಲಾಗಿಲ್ಲ. ಸಂಘದ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಲಾಗಿಲ್ಲ ಎಂದು ಆಕ್ಷೇಪಿಸಿ ಕೃಷ್ಣೇಗೌಡ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಬೇಕಾದರೆ ಸಾಕಷ್ಟು ಸಮಯ ಹಿಡಿಯುತ್ತದೆ ಎಂದು ಆಡಳಿತಾಧಿಕಾರಿ ಏಕಸದಸ್ಯ ಪೀಠದ ಮುಂದೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಒಪ್ಪಿಕೊಂಡಿದ್ದಾರೆ. 2018ರ ಜುಲೈನಲ್ಲಿ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗಿತ್ತು. ಅದಕ್ಕೆ ಬಂದ 156 ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗಿದೆ. 2021ರ ಏಪ್ರಿಲ್‌ನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಹೀಗಾಗಿ, ನಿಯಮದಂತೆ ಮತದಾರರ ಪಟ್ಟಿ ಪ್ರಕಟಿಸಲಾಗಿಲ್ಲ ಎಂಬ ವಾದ ಒಪ್ಪಲಾಗದು ಎಂದು ಪೀಠ ಹೇಳಿತು.

Also Read
[ಒಕ್ಕಲಿಗರ ಸಂಘದ ಚುನಾವಣೆ] ನಿಗದಿತ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ

ಅಲ್ಲದೇ, ಕಾಲಮಿತಿಯೊಳಗೆ ನಿಯಮಗಳ ಅನುಸಾರ ಮತದಾರರ ಪಟ್ಟಿ ತಯಾರಿಸಲಾಗಿದ್ದು, ಕರಡು ಮತದಾರರ ಪಟ್ಟಿ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದಾಗ ಆಕ್ಷೇಪ ಎತ್ತದ ಮೇಲ್ಮನವಿದಾರರು ಈಗ ಪ್ರಶ್ನೆ ಮಾಡುತ್ತಿದ್ದಾರೆ. ಇದು ಕಾನೂನಿನ ದೃಷ್ಟಿಯಲ್ಲಿ ಸಮರ್ಥನೀಯವಲ್ಲ. ಸಂಘಕ್ಕೆ ಚುನಾವಣೆ ನಡೆಯಬೇಕು ಎಂದು ಇದೇ ಹೈಕೋರ್ಟ್ ಹಲವು ಬಾರಿ ನಿರ್ದೇಶನ ನೀಡಿದೆ. ಚುನಾವಣಾ ಫಲಿತಾಂಶವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಏಕಸದಸ್ಯ ಪೀಠ ಸ್ಪಷ್ಟಪಡಿಸಿದೆ. ಹೀಗಾಗಿ, ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ ಎಂದು ಹೇಳಿದ ಪೀಠವು ಅರ್ಜಿಯನ್ನು ವಜಾಗೊಳಿಸಿತು.

Related Stories

No stories found.
Kannada Bar & Bench
kannada.barandbench.com