Shivamogga Mahanagar Palike
Shivamogga Mahanagar Palike

ಅವಧಿ ಮುಗಿದಿರುವ ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆಗೆ ಕೋರಿಕೆ: ಸರ್ಕಾರ, ಆಯೋಗಕ್ಕೆ ಹೈಕೋರ್ಟ್‌ ನೋಟಿಸ್‌

ಶಿವಮೊಗ್ಗ ಮಹಾನಗರ ಪಾಲಿಕೆಗೆ 2018ರ ಆಗಸ್ಟ್ 31ಕ್ಕೆ ಚುನಾವಣೆ ನಡೆದು ಅದರ ಐದು ವರ್ಷದ ಅವಧಿ 2023ರ ಆಗಸ್ಟ್ 30ಕ್ಕೆ ಮುಗಿದಿದೆ. ಅದೇ ವರ್ಷ ನವೆಂಬರ್ 27ಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದಿರುವ ನ್ಯಾಯಾಲಯ.
Published on

ಅವಧಿ ಮುಗಿದು ಎರಡೂವರೆ ವರ್ಷ ಆಗಿರುವ ಶಿವಮೊಗ್ಗ ಮಹಾನಗರ ಪಾಲಿಕೆಗೆ ತಕ್ಷಣ ಚುನಾವಣೆ ನಡೆಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ನೋಟಿಸ್‌ ಜಾರಿಗೊಳಿಸಿದೆ.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕೆ ಈ ಕಾಂತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ನಡೆಸಿತು.

ಕೆಲ ಕಾಲ ವಾದ ಆಲಿಸಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 21ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಂ ವಿನೋದ್ ಕುಮಾರ್ ವಾದಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆಗೆ 2018ರ ಆಗಸ್ಟ್ 31ಕ್ಕೆ ಚುನಾವಣೆ ನಡೆದು ಅದರ ಐದು ವರ್ಷದ ಅವಧಿ 2023ರ ಆಗಸ್ಟ್ 30ಕ್ಕೆ ಮುಗಿದಿದೆ. ಅದೇ ವರ್ಷ ನವೆಂಬರ್ 27ಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಳೆದ ಎರಡೂವರೆ ವರ್ಷದಿಂದ ಪಾಲಿಕೆ ಆಡಳಿತಾಧಿಕಾರಿಯ ಆಡಳಿತದಲ್ಲಿದೆ. ಕಾನೂನಿನ ಪ್ರಕಾರ ಅವಧಿ ಮುಗಿದ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು. ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲದ ಕಾರಣ, ಆಡಳಿತ ಮತ್ತು ಅಭಿವೃದ್ದಿ ಸಂಪೂರ್ಣವಾಗಿ ಕುಂಠಿತಗೊಂಡಿದೆ. ಆದ್ದರಿಂದ, 15 ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರಡಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com