
ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆ ದಂಧೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿರುವ ಲೋಕಾಯುಕ್ತದ ಮಾಜಿ ಹೆಡ್ ಕಾನ್‌ಸ್ಟೆಬಲ್ ನಿಂಗಪ್ಪ ಸಾವಂತ್ ವಿರುದ್ಧದ ಪೊಲೀಸ್ ತನಿಖೆ ಮತ್ತು ಮುಂದಿನ ನ್ಯಾಯಿಕ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಹೊಳಲ್ಕೆರೆ ತಾಲ್ಲೂಕು ತಾಳಿಕಟ್ಟೆಯ ನಿಂಗಪ್ಪ ಜಿ.ಅಲಿಯಾಸ್ ನಿಂಗಪ್ಪ ಸಾವಂತ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ನಿಂಗಪ್ಪರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ ದಳವಾಯಿ ವಾದ ಪುರಸ್ಕರಿಸಿದ ಪೀಠವು ತನಿಖೆ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಪ್ರತಿವಾದಿ ಲೋಕಾಯುಕ್ತ ಪೊಲೀಸ್ ಪರ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು.
ನಿಂಗಪ್ಪ ಅವರನ್ನು ಪೊಲೀಸರು 2025ರ ಮೇ 31ರಂದು ಹೊಸದುರ್ಗದಲ್ಲಿ ಬಂಧಿಸಿದ್ದರು. ದಾಖಲೆಗಳಲ್ಲಿ ಬಂಧನವನ್ನು 2025ರ ಜೂನ್ 2ರಂದು ಬೆಂಗಳೂರಿನ ರಾಜಾಜಿ ನಗರದ ಮಾರುತಿ ಮೈದಾನದಲ್ಲಿ ಎಂದು ತೋರಿಸಲಾಗಿದೆ. ಇದು ಅಕ್ರಮವಾಗಿದ್ದು, ಪೊಲೀಸರು ಬಂಧನಕ್ಕೂ ಮುನ್ನ ಆರೋಪಿಗೆ ನೀಡಬೇಕಾದ ಬಂಧನ ಆಧಾರಗಳನ್ನು ಒದಗಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಸಲಾಗುವ ದಾಳಿಗಳ ಕುರಿತಂತೆ ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಮತ್ತು ದಾಳಿಗಳ ಬಗ್ಗೆ ಮುಂಗಡ ಮಾಹಿತಿಯನ್ನು ನಿಂಗಪ್ಪ ಸೋರಿಕೆ ಮಾಡುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದ್ದು, ಅವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ–1988ರ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.