ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹಾಗೂ ನಿರ್ವಹಣೆ ವಿಚಾರದಲ್ಲಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ನೀಡಿದ ಆದೇಶವನ್ನು ಪಾಲಿಸದ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿರುವ ಕರ್ನಾಟಕ ಹೈಕೋರ್ಟ್, “ಈ ಭಾಷೆಯಲ್ಲಿ ಹೇಳಿದರೆ ಮಾತ್ರ ಸರ್ಕಾರಕ್ಕೆ ಅರ್ಥವಾಗುತ್ತದೆ” ಎಂದು ಮಾರ್ಮಿಕವಾಗಿ ನುಡಿದಿದೆ.
ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಲೆಟ್ಜ್‌ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದಿಕ್ಷೀತ್ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪುತ್ತಿಗೆ ರಮೇಶ್ ಅವರು ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹಾಗೂ ನಿರ್ವಹಣೆ ಕುರಿತ ಪ್ರಕರಣ ಮೂರು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ರಾಜ್ಯ ಸರ್ಕಾರ ಇದರ ಬಗ್ಗೆ ಗಾಢ ಮೌನವಹಿಸಿದ್ದು, ಒಂದೇ ಒಂದು ಹೇಳಿಕೆ, ವರದಿ, ಅಫಿಡವಿಟ್, ಆಕ್ಷೇಪಣೆ ಯಾವುದೂ ಸಲ್ಲಿಸಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿ ಮೂರು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸಲು 2023ರ ಆಗಸ್ಟ್ 8ರಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಆದರೆ, ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪೀಠದ ಗಮನಕ್ಕೆ ತಂದರು.
ಆಗ ಪೀಠವು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಿಂದ ತಮಗೆ ಯಾವುದೇ ನಿರ್ದೇಶನ, ಮಾಹಿತಿ ಬಂದಿಲ್ಲ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ಆಗ ನ್ಯಾಯಾಲಯವು ತಮ್ಮ ಬಳಿ ಮಾಹಿತಿ ಇಲ್ಲ ಎಂದು ಸರ್ಕಾರದ ಪರ ವಕೀಲರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ಸರ್ಕಾರದ ಈ ಧೋರಣೆ ಸಹ್ಯವಲ್ಲ ಎಂದು ಕಟುವಾಗಿ ಹೇಳಿ ತನ್ನ ತಪ್ಪಿಗಾಗಿ ಸರ್ಕಾರ 5 ಲಕ್ಷ ರೂಪಾಯಿಗಳನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಖಾತೆಗೆ ಎರಡು ವಾರಗಳಲ್ಲಿ ಜಮೆ ಮಾಡಬೇಕು. ಅಲ್ಲದೇ ಮುಂದಿನ ವಿಚಾರಣೆಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶನ ನೀಡಿ ಪ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು.
ಸರ್ಕಾರದ ನಡೆಗೆ ಹೈಕೋರ್ಟ್ ಕಿಡಿ: ದಂಡದ ಮೊತ್ತ ಕಡಿಮೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿಕೊಂಡರು. ಅದಕ್ಕೆ ನ್ಯಾಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು, ಸರ್ಕಾರದ ಈ ನಡೆಗೆ ನನ್ನ ಪ್ರಕಾರ 25 ಲಕ್ಷ ರೂಪಾಯಿ ದಂಡ ವಿಧಿಸಬೇಕು. ಆದರೆ, ಮುಖ್ಯ ನ್ಯಾಯಮೂರ್ತಿಗಳು ಕರುಣೆ ತೋರಿ 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ನಮಗೆ ಹೇಳಲು ಬೇಸರವಾಗುತ್ತದೆ. ಆದರೆ, ಸರ್ಕಾರ ಮತ್ತು ಅಧಿಕಾರಿಗಳಿಗೆ ಇಂತಹದ್ದೇ ಭಾಷೆ ಅರ್ಥವಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ಈ ಪ್ರಕರಣವು ಮೂರು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಆದರೆ, ರಾಜ್ಯ ಸರ್ಕಾರ ಈವರೆಗೆ ಈ ವಿಚಾರವಾಗಿ ಒಂದೇ ಒಂದು ಅಫಿಡವಿಟ್ ಸಲ್ಲಿಸಿಲ್ಲ. ಬೆಂಗಳೂರು ನಿವಾಸಿಗಳಿಗೆ ಸಂಬಂಧಿಸಿದ ಸಾರ್ವಜನಿಕ ಮಹತ್ವದ ಇಂತಹ ವಿಷಯದಲ್ಲೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿರುವುದು, ಮೌನವಾಗಿರುವುದು ಅಚ್ಚರಿ ತರಿಸಿದೆ ಎಂದು ಹೇಳಿದ್ದ ಹೈಕೋರ್ಟ್, ಮೂರು ವಾರಗಳಲ್ಲಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 2023ರ ಆಗಸ್ಟ್ 8ರಂದು ನಿರ್ದೆಶನ ನೀಡಿತ್ತು.