ಅನಧಿಕೃತ ಜಾಹೀರಾತು ಫಲಕ ನಿಯಂತ್ರಿಸುವಲ್ಲಿ ವಿಫಲ: ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಕ್ರಮಕ್ಕೆ ಕೋರಿಕೆ

ಜಾಹೀರಾತು ಫಲಕ ಅಳವಡಿಸಲು ಸ್ಥಳೀಯ ಸಂಸ್ಥೆಯ ಸಕ್ಷಮ ಅಧಿಕಾರಿಯಿಂದ ಲಿಖಿತ ಅನುಮತಿ ಪಡೆಯಬೇಕು. ಆದರೆ, ಅನುಮತಿ ಪಡೆಯದೇ ವಿಧಾನಸೌಧ ಆವರಣ ಸೇರಿದಂತೆ ವಿವಿಧೆಡೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಪೋಸ್ಟರ್‌ ಅಳವಡಿಸಲಾಗುತ್ತಿದೆ ಎಂದು ಆಕ್ಷೇಪ.
Karnataka High Court
Karnataka High Court

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ಅಳವಡಿಕೆ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಅವರು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಆಡಳಿತಾಧಿಕಾರಿಯೂ ಆದ ನಗರಾಭಿವೃದ್ಧಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಜಾಹೀರಾತು ಫಲಕ ಅಳವಡಿಸಬೇಕಾದರೆ ಸ್ಥಳೀಯ ಸಂಸ್ಥೆಯ ಸಕ್ಷಮ ಅಧಿಕಾರಿಯಿಂದ ಲಿಖಿತ ಅನುಮತಿ ಪಡೆಯಬೇಕು. ಆದರೆ, ಅನುಮತಿ ಪಡೆಯದೇ ವಿಧಾನಸೌಧ ಆವರಣ ಸೇರಿದಂತೆ ನಗರದ ವಿವಿಧ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಪೋಸ್ಟರ್‌ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ನಗರದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಜೊತೆಗೆ, ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಕುರಿತು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಯನ್ನು ತಡೆಯಬೇಕು ಎಂದು ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನಲ್ಲಿ ಅಳವಡಿಸಿರುವ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಅನಧಿಕೃತವಾಗಿ ಅಳವಡಿಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂಬುದು ಸೇರಿದಂತೆ ಇದೇ ವಿಚಾರವಾಗಿ 2017ರಿಂದಲೂ ಹೈಕೋರ್ಟ್ ಕಾಲಕಾಲಕ್ಕೆ ಅನೇಕ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶವನ್ನು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಅಧಿಕಾರಿಗಳು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಉದ್ದೇಶಪೂರ್ವಕವಾಗಿಯೇ ಉಲ್ಲಂಘನೆ ಮಾಡಿದ್ದಾರೆ. ಇದರಿಂದ ನಗರದಲ್ಲಿ ಅನಧಿಕೃತ ಜಾಹೀರಾತುಗಳ ಅಳವಡಿಕೆ ಹೆಚ್ಚಿದೆ. ಅದರಲ್ಲೂ ರಾಜಕಾರಣಿಗಳ ಫೋಟೋಗಳನ್ನು ಎಲ್ಲೆಂದರಲ್ಲಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅನಧಿಕೃತ ಜಾಹೀರಾತು ಅಳಡಿಕೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣದ ದಾಖಲಿಸಲು ಮತ್ತು ದಂಡ ವಸೂಲಿ ಮಾಡಲು ಅವಕಾಶವಿದೆ. ಆದರೆ, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧಕ ಸೂಕ್ತ ಕ್ರಮ ಜರುಗಿಸಲು ನಿರ್ಲಕ್ಷ್ಯ ವಹಿಸುತ್ತಿದಾರೆ. ಆ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಅರ್ಜಿಯಲಿನ ಇತರೆ ಆರೋಪಿಗಳ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಬೇಕು ಎಂದು ಕೋರಲಾಗಿದೆ.

Related Stories

No stories found.
Kannada Bar & Bench
kannada.barandbench.com