ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಆನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.
ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿಯ ಯಾದಗಿರಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಿಶೇಷ ವಕೀಲ ಸಿ ಜಗದೀಶ್ ಅವರು ಹೈಕೋರ್ಟ್ ನಿರ್ದೇಶನದ ಅನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಅರ್ಜಿದಾರರ ಪರ ವಕೀಲೆ ಓ ಅಶ್ವಿನಿ ಅವರು ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ 6ರಿಂದ 7 ಸಾವಿರ ಜನರ ಬಗ್ಗೆ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಇವರೆಲ್ಲರ ವಿರುದ್ಧ ಕ್ರಮದ ಅಗತ್ಯವಿದೆ ಎಂದು ಕೋರಿದರು.
ನಕಲಿ ಜಾತಿ ಪ್ರಮಾಣ ಪಡೆದುಕೊಂಡಿರುವವರ ವಿರುದ್ಧ ಮೂರು ವಾರಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ಪೀಠವು ವಿಚಾರಣೆಯನ್ನು ಜೂನ್ 11ಕ್ಕೆ ಮುಂದೂಡಿತು.
ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪ ಜಾತಿಯಾದ ಪರಿವಾರ ಹಾಗೂ ತಳವಾರ ಬೋಯಿ ಉಪ ಪಂಗಡದವರಿಗೂ ಪರಿಶಿಷ್ಟ ಪಂಗಡದ (ಎಸ್‌ಟಿ) ನಕಲಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬುದು ಅರ್ಜಿದಾರರ ಮನವಿಯಾಗಿದೆ.