
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿರುವ ಗಾಲಿ ಜನಾರ್ದನ ರೆಡ್ಡಿ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮತ್ತು ಜನಾರ್ದನ ರೆಡ್ಡಿ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಆಂಧ್ರಪ್ರದೇಶ ಅನಂತಪುರದ ಟಪಾಲ್ ಶ್ಯಾಮ್ ಪ್ರಸಾದ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ನಡೆಸಿತು.
ಅರ್ಜಿದಾರರ ವಾದ ಆಲಿಸಿದ ಪೀಠವು ಕೇಂದ್ರ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಗಂಗಾವತಿ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜನಾರ್ದನ ರೆಡ್ಡಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿದೆ.
ಗಂಗಾವತಿ ಕ್ಷೇತ್ರದಿಂದ ಆಯ್ಕೆಯಾಗಿರುವ ಜನಾರ್ದನ ರೆಡ್ಡಿಯು ಫಾರ್ಮ್ 25 ಮತ್ತು 26ರಲ್ಲಿ ನೈಜ ಆಸ್ತಿ ವಿವರ, ಕಾರುಗಳ ಮಾಹಿತಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅವರ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿವರ, ಇತ್ಯರ್ಥವಾಗಿರುವ ಮತ್ತು ಶಿಕ್ಷೆಯಾಗಿರುವ ಪ್ರಕರಣಗಳ ಮಾಹಿತಿಯನ್ನು ನೀಡಿಲ್ಲ. ಈ ಸಂಬಂಧ 14.06.2023 ಮತ್ತು 12.06.2023ರಂದು ಕೇಂದ್ರ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಮತ್ತು ಕ್ಷೇತ್ರದ ಚುನಾವಣಾಧಿಕಾರಿಗೆ ಮನವಿ ನೀಡಿ, ರೆಡ್ಡಿ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಲಾಗಿದೆ. ಈ ಕುರಿತು ಯಾವುದೇ ಕ್ರಮವನ್ನು ಸಕ್ಷಮ ಪ್ರಾಧಿಕಾರಗಳು ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ದಾಖಲೆಗಳನ್ನು ತರಿಸಿ ಪರಿಶೀಲಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರು 66213 ಮತಗಳನ್ನು ಪಡೆದು, 8,266 ಮತಗಳ ಅಂತರದಿಂದ ಕಾಂಗ್ರೆಸ್‌ನ ಇಕ್ಬಾಲ್ ಅನ್ಸಾರಿ ಅವರ ವಿರುದ್ಧ ಜಯಗಳಿಸಿದ್ದಾರೆ.