ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ ಕಾರಿಡಾರ್‌ನ ಕೊಳತೂರು ಜಂಕ್ಷನ್‌ ಬಳಿ ಮೇಲ್ಸೇತುವೆ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

ಎಕ್ಸ್‌ಪ್ರೆಸ್‌ ಕಾರಿಡಾರ್‌ ರಸ್ತೆಯಿಂದ ಕೊಳತ್ತೂರು ಗ್ರಾಮದ ಮುಖ್ಯ ದ್ವಾರಕ್ಕೆ ಲಿಂಕ್‌ ರಸ್ತೆ ಕೊಟ್ಟು ಅಡ್ಡಿಪಡಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮುಖ್ಯವಾಗಿ ಆಸ್ಪತ್ರೆಗೆ ಬರುವವರು ಸುತ್ತುಬಳಸಿ ಬರಬೇಕಿದೆ ಎಂದು ಆಕ್ಷೇಪ.
Chief Justice P S Dinesh Kumar & Justice T G Shivashankare Gowda, Karnataka HC
Chief Justice P S Dinesh Kumar & Justice T G Shivashankare Gowda, Karnataka HC

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ ಕಾರಿಡಾರ್‌ ಮಾರ್ಗದಲ್ಲಿನ ಹೊಸಕೋಟೆ ತಾಲ್ಲೂಕಿನ ಕೊಳತೂರು ಜಂಕ್ಷನ್‌ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೃಷಿಕರಾದ ಕೆ ವಿ ರವಿಕುಮಾರ್ ಸೇರಿದಂತೆ ಕೊಳತೂರು, ಅಪ್ಪಸಂದ್ರ, ಸೋಲೂರು, ಊರಹಳ್ಳಿ ಗ್ರಾಮಗಳ ಒಟ್ಟು 13 ನಿವಾಸಿಗಳು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎಂ ಶಿವಪ್ರಕಾಶ್‌ ಅವರು ಕಾರಿಡಾರ್‌ ನಿರ್ಮಾಣದಿಂದ ಗ್ರಾಮೀಣ ಭಾಗದ ನಿವಾಸಿಗಳು ಅನಪೇಕ್ಷಿತ ತೊಂದರೆ ಅನುಭವಿಸುವಂತಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಇದನ್ನು ಪರಿಗಣಿಸಿದ ಪೀಠವು ಪ್ರತಿವಾದಿಗಳಾದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ, ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ ಯೋಜನಾ ನಿರ್ದೇಶಕ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಮಾರ್ಚ್‌ 1ಕ್ಕೆ ಮುಂದೂಡಲಾಗಿದೆ.

ಅರ್ಜಿದಾರರ ಕೋರಿಕೆ ಏನು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಗ್ರಾಮ ಕೊಳತೂರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಇದರ ಮುಖ್ಯ ರಸ್ತೆಯು ಕನಿಷ್ಠ 20 ಗ್ರಾಮಗಳನ್ನು ಸಂಪರ್ಕಿಸುತ್ತದೆ. ಈ ಗ್ರಾಮ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದೆ. ಅಂತೆಯೇ, ಸಮೀಪದಲ್ಲೇ ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಯನ್ನು ಸುಮಾರು ₹ 40 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಭಾಗದಲ್ಲಿ ಪ್ರತಿದಿನ ಸರಾಸರಿ ಒಂದು ಸಾವಿರ ವಾಹನಗಳ ಸಂಚಾರವಿದೆ. ಮುಖ್ಯವಾಗಿ ಶಾಲಾ ಮಕ್ಕಳು ಮತ್ತು ಹಾಲು ಸಾಗಣೆ ವಾಹನಗಳು, ಉಗ್ರಾಣಗಳಿಂದ ತರಕಾರಿ, ಹಣ್ಣು, ಇತ್ಯಾದಿ ದಿನಬಳಕೆ ಸಾಮಗ್ರಿಗಳ ಸರಬರಾಜು ನೇರವಾಗಿ ಬೆಂಗಳೂರು–ಕೋಲಾರ ರಸ್ತೆಯ ಎನ್‌ಎಚ್‌–75ಕ್ಕೆ ತಲುಪುತ್ತದೆ. 

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ ಕಾರಿಡಾರ್‌ ರಸ್ತೆಯಿಂದ ಕೊಳತೂರು ಗ್ರಾಮದ ಮುಖ್ಯ ದ್ವಾರಕ್ಕೆ ಲಿಂಕ್‌ ರಸ್ತೆ ಕೊಟ್ಟು ಅಡ್ಡಿಪಡಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮುಖ್ಯವಾಗಿ ತಾಯಿ ಮಕ್ಕಳ ಆಸ್ಪತ್ರೆಗೆ ಬರುವವರು ಸುತ್ತುಬಳಸಿ ಬರಬೇಕಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಸಾಕಷ್ಟು ಮನವಿ ಸಲ್ಲಿಸಿದ್ದರೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬೇರಾವುದೇ ರೀತಿಯ ಪರಿಹಾರ ಮಾರ್ಗವನ್ನೂ ತೋರಿಸಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಕೊಳತೂರು ಮತ್ತು ಸುತ್ತಲಿನ 20 ಗ್ರಾಮಗಳನ್ನು ಸಂಧಿಸುವ ರಾಷ್ಟ್ರೀಯ ಹೆದ್ದಾರಿ–75 ಹಾಗೂ 648ರ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಪರ್ಕ ಕಲ್ಪಿಸುವ ಕೊಳತೂರು ಜಂಕ್ಷನ್‌ ಬಳಿ ಮೇಲ್ಸೇತುವೆ ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಎನ್‌ಎಚ್‌ಎಐ ಸೂಕ್ತವಾದ ನೀಲನಕ್ಷೆ ಸಿದ್ಧಪಡಿಸಬೇಕು. ಇದಕ್ಕಾಗಿ 2023ರ ಸೆಪ್ಟೆಂಬರ್ 4ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿದೆ.

Kannada Bar & Bench
kannada.barandbench.com