ಬೆಂಗಳೂರು ನಿರ್ವಹಣೆಗೆ ಮಹಾನಗರ ಯೋಜನಾ ಸಮಿತಿ ರಚನೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್​

ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ನ್ಯಾಯಾಲಯದ ನಿರ್ದೇಶನ ನೀಡದೆ ಅಧಿಕಾರಿಗಳು ನಿದ್ದೆಯಿಂದ ಎದ್ದೇಳುವುದಿಲ್ಲ. ಹೀಗಾಗಿ, ಸಮಿತಿಗಳ ರಚನೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ ವಕೀಲರು.
Chief Justice P B Varale and Justice M G S Kamal
Chief Justice P B Varale and Justice M G S Kamal

ರಾಜ್ಯ ರಾಜಧಾನಿ ಬೆಂಗಳೂರು ನಗರವನ್ನು ನಿರ್ವಹಣೆ ಮಾಡುವುದಕ್ಕಾಗಿ ಪರಂಪರೆ ಸಂರಕ್ಷಣಾ ಸಮಿತಿ, ಮಹಾನಗರ ಯೋಜನಾ ಸಮಿತಿ ಮತ್ತು ಕುಂದು ಕೊರತೆಗಳ ಪರಿಹಾರ ಪ್ರಾಧಿಕಾರ ರಚನೆ ಮಾಡುವಂತೆ ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನ ವಕೀಲ ಎಸ್ ಉಮಾಪತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್​ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ವಕೀಲ ಉಮಾಪತಿ ಅವರು ಬೆಂಗಳೂರು ಅಭಿವೃದ್ಧಿ ಹೊಂದುತ್ತಿದ್ದು, ಬಿಬಿಎಂಪಿ ಕಾಯಿದೆ 2020ರಲ್ಲಿ ಉಲ್ಲೇಖಿಸಿರುವಂತೆ ಮೂರು ಸಮಿತಿಗಳು ನಗರದ ಸಮಗ್ರ ಅಭಿವೃದ್ಧಿಗೆ ಅತ್ಯಗತ್ಯ. ಇದಕ್ಕಾಗಿ ತಜ್ಞರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿ ರಚಿಸಬೇಕು. ಆದರೆ, ಸರ್ಕಾರ ಇದುವರೆಗೆ ಅವುಗಳ ರಚನೆಗೆ ಮುಂದಾಗಿಲ್ಲ ಎಂದು ವಿವರಿಸಿದರು.

ಆಗ ಪೀಠವು “ಸರ್ಕಾರಕ್ಕೆ ಮನವಿ ಮಾಡಲಾಗಿದೆಯೇ” ಎಂದು ಪ್ರಶ್ನಿಸಿತು. ಇದಕ್ಕೆ ವಕೀಲ ಉಮಾಪತಿ ಅವರು, “ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ನ್ಯಾಯಾಲಯದ ನಿರ್ದೇಶನ ನೀಡದೆ ಅಧಿಕಾರಿಗಳು ನಿದ್ದೆಯಿಂದ ಎದ್ದೇಳುವುದಿಲ್ಲ. ಯಾವುದೇ ಕ್ರಮಕ್ಕೂ ಮುಂದಾಗುವುದಿಲ್ಲ.  ಹೀಗಾಗಿ, ಸಮಿತಿಗಳ ರಚನೆ ಮಾಡುವಂತೆ ನಿರ್ದೇಶನ ನೀಡಬೇಕು” ಎಂದು ಕೋರಿದರು.

“ಉಲ್ಲೇಖಿತ ಸಮಿತಿಗಳ ರಚನೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಅವ್ಯವಸ್ಥಿತವಾಗಿ ಬೆಳವಣಿಗೆಯಾಗುತ್ತಿದ್ದು, ಸಂಚಾರ ಸಮಸ್ಯೆ, ಕುಡಿಯುವ ನೀರಿನ ಕೊರತೆ, ಪಾರಂಪರಿಕ ಕಟ್ಟಡಗಳ ರಕ್ಷಣೆ ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗುತ್ತದೆ. ಸಾರ್ವಜನಿಕರ ಕುಂದುಕೊರತೆ ನಿವಾರಣಾ ಪ್ರಾಧಿಕಾರ ರಚನೆಯಾಗದ ಹಿನ್ನೆಲೆಯಲ್ಲಿ, ಪಾಲಿಕೆಯ ಆಡಳಿತದಲ್ಲಿನ ದುರಾಡಳಿತ ಮತ್ತು ನಾಗರಿಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಪೀಠಕ್ಕೆ ವಿವರಿಸಿದರು.

Related Stories

No stories found.
Kannada Bar & Bench
kannada.barandbench.com