ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಅವರನ್ನು ಮುಂದಿನ ಲೋಕಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ ಇರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ಬುಧವಾರ ನಡೆಸಿದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಭಾರತದ ಮಾಜಿ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದು ಈ ವೇಳೆ ಮುಂದಿನ ಲೋಕಪಾಲ್ ನೇಮಕಾತಿಗೆ ಅಂತಿಮಗೊಳಿಸಲಾದ ಹೆಸರುಗಳ ಬಗ್ಗೆ ಚರ್ಚಿಸಲಾಯಿತು ಎಂದು ವರದಿಯಾಗಿದೆ.
ಲೋಕಪಾಲ್ ಮತ್ತು ಲೋಕಾಯುಕ್ತ ಕಾಯಿದೆ 2013 ರ ಅಡಿಯಲ್ಲಿ ಲೋಕಪಾಲ್ ಅಸ್ತಿತ್ವಕ್ಕೆ ಬಂದಿತ್ತು. ಲೋಕಪಾಲ ಕಾಯಿದೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಹುದ್ದೆಯಲ್ಲಿರುವವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ವಿಚಾರಣೆ ಮತ್ತು ತನಿಖೆ ನಡೆಸುವ ಕಾರ್ಯವನ್ನು ಲೋಕಪಾಲಕ್ಕೆ ವಹಿಸಲಾಗಿದೆ.
ಜಾರ್ಖಂಡ್ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಮೊಹಾಂತಿ ಅವರು ಲೋಕಪಾಲ್‌ನ ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರಲ್ಲಿ ಲೋಕಪಾಲ್ ನ್ಯಾಯಾಂಗ ಸದಸ್ಯರಾಗಿ ನೇಮಕಗೊಂಡ ಅವರನ್ನು ಮೇ 2022ರಲ್ಲಿ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.