ಗುಜರಾತ್ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಶೈಕ್ಷಣಿಕ ಪದವಿಯ ಬಗ್ಗೆ ಮಾಹಿತಿಯನ್ನು ಒದಗಿಸುವ ಅಗತ್ಯವಿಲ್ಲ ಮಾರ್ಚ್ 31ರಂದು ಗುಜರಾತ್ ಹೈಕೋರ್ಟ್ ನೀಡಿದ್ದ ತೀರ್ಪಿನ ಸೂಕ್ತತೆ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಉಚ್ಚ ನ್ಯಾಯಾಲಯ ತಿರಸ್ಕರಿಸಿದೆ [ಅರವಿಂದ ಕೇಜ್ರಿವಾಲ್ ಮತ್ತು ಗುಜರಾತ್ ವಿಶ್ವವಿದ್ಯಾಲಯ ನಡುವಣ ಪ್ರಕರಣ].
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರೂ ಆಗಿರುವ ಕೇಜ್ರಿವಾಲ್ ಅವರ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು ಇಂದು ತೀರ್ಪು ಪ್ರಕಟಿಸಿದರು. ಆದೇಶದ ವಿವರವಾದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಧಾನಿ ಮೋದಿ ಅವರ ಪದವಿಯ ವಿವರಗಳನ್ನು ಒದಗಿಸುವಂತೆ ಸೂಚಿಸಿದ್ದ ಮುಖ್ಯ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಹೈಕೋರ್ಟ್ ಈ ಹಿಂದೆ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸಿಐಸಿ ಆದೇಶ ಜಾರಿಗೊಳಿಸಿತ್ತು. ವಿವರಗಳನ್ನು ಬಹಿರಂಗಪಡಿಸಲು ಗುಜರಾತ್ ವಿಶ್ವವಿದ್ಯಾಲಯಕ್ಕೆ ಆದೇಶಿಸಿತ್ತು. ಈ ನಿರ್ಧಾರ ಪ್ರಶ್ನಿಸಿ ವಿವಿ, ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿತ್ತು. ಮೇಲ್ಮನವಿ ಪುರಸ್ಕರಿಸಿದ್ದ ಹೈಕೋರ್ಟ್ ಆರ್‌ಟಿಐ ಕಾಯಿದೆಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಕೇಜ್ರಿವಾಲ್‌ಗೆ ₹25,000 ದಂಡ ವಿಧಿಸಿತ್ತು. ಈ ತೀರ್ಪು ಮರು ಪರಿಶೀಲನೆ ಕೋರಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು.
ಕೇಜ್ರಿವಾಲ್ ಪರವಾಗಿ ಹಿರಿಯ ವಕೀಲರಾದ ಪಾರ್ಸಿ ಕವೀನಾ ವಾದ ಮಂಡಿಸಿದ್ದರು. ಗುಜರಾತ್ ವಿಶ್ವವಿದ್ಯಾಲಯವನ್ನು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿನಿಧಿಸಿದ್ದರು.