

“ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ” ಎಂಬುದು ಸೇರಿದಂತೆ ಆಕ್ಷೇಪಾರ್ಹ ಹೇಳಿಕೆ ಹಾಗೂ ಪ್ರಚೋದನಕಾರಿ ಭಾಷಣದ ಮಾಡಿದ ಆರೋಪದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯದ ವಿವಿಧ ನಾಲ್ಕು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.
ವಿಜಯಪುರದ ಗಾಂಧಿ ಚೌಕ್, ಬೆಂಗಳೂರಿನ ಸಂಜಯ್ ನಗರ, ಬೆಳಗಾವಿ ಜಿಲ್ಲೆ ಬೈಲಹೊಂಗಲ, ಬಾಗಲಕೋಟೆ ಜಿಲ್ಲೆ ಮುಧೋಳ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಿಚಾರಣೆ ನಡೆಸಿದ ಪೀಠವು ಅರ್ಜಿಗಳನ್ನು ಮಾನ್ಯ ಮಾಡಿ ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿತು. ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದಿಸಿದರು.
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಪಾಕಿಸ್ತಾನ ಇದೆ ಎಂದು ಹೇಳಿದ್ದರು. ಈ ಸಂಬಂಧ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ 2024ರ ಏಪ್ರಿಲ್‌ನಲ್ಲಿ ದೂರು ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ದಿನೇಶ್ ಗುಂಡೂರಾವ್ ಪತ್ನಿ ಟಬು ಗುಂಡೂರಾವ್ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು.
ಇದಲ್ಲದೇ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣ ಹಾಗೂ ಬಾಗಕೋಟೆ ಜಿಲ್ಲೆಯ ಮುಧೋಳದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ 2024ರ ಸೆಪ್ಟೆಂಬರ್ ತಿಂಗಳಲ್ಲಿ ಪ್ರತ್ಯೇಕ ಎರಡು ದೂರು ದಾಖಲಿಸಲಾಗಿತ್ತು. ಇವುಗಳನ್ನು ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.