ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿರುದ್ಧದ ಅಪಹರಣ, ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆ ಮುಂದೂಡಿದ ಹೈಕೋರ್ಟ್
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಮೈಸೂರು ಜಿಲ್ಲೆಯ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಎಫ್ಐಆರ್ ರದ್ದುಕೋರಿ ಪ್ರಕರಣದ ಮೊದಲನೇ ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು.
ರೇವಣ್ಣ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಅರ್ಜಿಯಲ್ಲಿ ಕೆಲ ತಿದ್ದುಪಡಿ ಮಾಡಬೇಕಿದೆ. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.
ಅದನ್ನು ಪರಿಗಣಿಸಿದ ಪೀಠವು ಅರ್ಜಿದಾರರ ಪರ ವಕೀಲರ ಮನವಿಯ ಮೇರೆಗೆ ಅರ್ಜಿ ವಿಚಾರಣೆ ಮುಂದೂಡಲಾಗುತ್ತಿದೆ ಎಂದು ತಿಳಿಸಿ, ಅರ್ಜಿಯನ್ನು ಸೆಪ್ಟೆಂಬರ್ 26ರಂದು ವಿಚಾರಣೆಗೆ ನಿಗದಿಪಡಿಸಿತು.
ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ 2024ರ ಮೇ 2ರಂದು ಕೆ ಆರ್ ನಗರ ಪೊಲೀಸರು ಎಚ್ ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರ ರದ್ದು ಕೋರಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಆರೋಪ ಪಟ್ಟಿ ಸಲ್ಲಿಸಿದೆ. ರೇವಣ್ಣಗೆ ಜಾಮೀನು ದೊರೆತಿದ್ದು, ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಇನ್ನು, ಹೊಳೆನರಸೀಪುರ ಠಾಣೆಯಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನ ಅನ್ವಯ ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಪ್ರಕರಣದ ರದ್ದತಿಯನ್ನು ಕೋರಿ ರೇವಣ್ಣ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲೂ ರೇವಣ್ಣಗೆ ಜಾಮೀನು ದೊರೆತಿದ್ದು, ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕ್ರಿಯೆ ಮುಂದೂಡುವಂತೆ ಹೈಕೋರ್ಟ್ ಆದೇಶ ಮಾಡಿದೆ.