ಅತ್ಯಾಚಾರ ಸಂತ್ರಸ್ತೆಯಾಗಿರುವ ಮಹಿಳೆಯನ್ನು ಅಪಹರಿಸಿದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಜೆಡಿಎಸ್ ಮಾಜಿ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಗೆ ತಿದ್ದುಪಡಿ ಮಾಡಲು ಕೋರಿ ಸಲ್ಲಿಸಲಾದ ಮನವಿಯನ್ನು ಗುರುವಾರ ಪುರಸ್ಕರಿಸಿರುವ ಕರ್ನಾಟಕ ಹೈಕೋರ್ಟ್ ಅದಕ್ಕೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ರೇವಣ್ಣ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ಮೂಲ ಅರ್ಜಿಗೆ ತಿದ್ದುಪಡಿ ಮಾಡಲು ಮನವಿ ಸಲ್ಲಿಕೆ ಮಾಡಲಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ತಿಳಿಸಿದರು.
ಮನವಿ ಪುರಸ್ಕರಿಸಿದ ಪೀಠವು ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿತು.
ಮೈಸೂರು ಜಿಲ್ಲೆಯ ಕೆ ಆರ್ ನಗರ ಠಾಣೆಯಲ್ಲಿ ಎಚ್ ಡಿ ರೇವಣ್ಣ, ಅವರ ಬೆಂಬಲಿಗ ಸತೀಶ್ ಬಾಬಣ್ಣ, ಭವಾನಿ ರೇವಣ್ಣ ಸೇರಿದಂತೆ ಒಂಭತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಆರೋಪ ಪಟ್ಟಿಯನ್ನೂ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ.