

ಬೆಂಗಳೂರಿನ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು, ಈ ಆಚರಣೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನದ ಟ್ರಸ್ಟಿಗಳಿಗೆ ಅನುಮತಿಸಿ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶ ಮಾಡಿದೆ.
ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಒಪ್ಪಿಸಿ 2025ರ ಜುಲೈ 8ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್‌ನ ಸಂಚಾಲಕರಾದ ಬಿ ಪಿ ನಾಗರಾಜು ಮತ್ತು ಇತರೆ ಟ್ರಸ್ಟಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠ ನಡೆಸಿತು.
“ಅರ್ಜಿದಾರರಾದ ದೇವಸ್ಥಾನದ ಟ್ರಸ್ಟಿಗಳು ಮಾರ್ಚ್ 23 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಮೈಸೂರು ರಸ್ತೆ ಗಾಳಿ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಬಹುದು. ಆದರೆ, ಅರ್ಜಿದಾರರು ಜಾತ್ರೆಯ ಹಣಕಾಸು ವಹಿವಾಟು ನಿರ್ವಹಣೆ ಮಾಡುವಂತಿಲ್ಲ. ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಣಕಾಸು ನಿರ್ವಹಣೆಯ ಮಾಡಬೇಕು. ಅವರು ಜಾತ್ರೆ ಪೂರ್ಣಗೊಂಡ 15 ದಿನಗಳಲ್ಲಿ ಲೆಕ್ಕಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಟ್ರಸ್ಟ್ ಕಸ್ಟಡಿಯಲ್ಲಿರುವ ಉತ್ಸವ ಮೂರ್ತಿಯ ಆಭರಣಗಳನ್ನು ಆಯುಕ್ತರ ಸುಪರ್ದಿಗೆ ಒಪ್ಪಿಸಬೇಕು” ಎಂದು ನ್ಯಾಯಾಲಯ ನಿರ್ದೇಶಿಸಿದೆ.
ಪ್ರಕರಣದ ಹಿನ್ನೆಲೆ: ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ. ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದರೂ ಪ್ರತಿ ವರ್ಷ ಉಳಿತಾಯವಿಲ್ಲದೆ ವೆಚ್ಚ ಮಾಡಲಾಗುತ್ತಿದೆ. ದೇವಸ್ಥಾನದ ಹಣ ದುರುಪಯೋಗವಾಗುತ್ತಿದೆ. ಆದಾಯ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆ ನಿರ್ವಹಣೆ ಮಾಡಿಲ್ಲ. ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ನೋಟಿಸ್ ನೀಡಿದ ಬಳಿಕ ದಾಖಲೆ ಸೃಷ್ಟಿಸಿರುವುದು ಕಂಡು ಬಂದಿದೆ. ಇದರಿಂದ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ನೀಡಲಾಗುತ್ತಿದೆ ಎಂದು 2025ರ ಜುಲೈ 8ರಂದು ಹೊರಡಿಸಿದ ಆದೇಶದಲ್ಲಿ ಸರ್ಕಾರ ತಿಳಿಸಿತ್ತು. ಈ ಆದೇಶ ಪಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ಏಕಸದಸ್ಯ ಪೀಠವು 2025ರ ಜುಲೈ 16ರಂದು ನಿರಾಕರಿಸಿತ್ತು.