ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ನಿರ್ದಿಷ್ಟ ಭಾಗವನ್ನು ತೆಗೆದುಹಾಕಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪೋಕ್ಸೊ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮನವಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕಟಿಸಿದ್ದು, ತೀರ್ಪಿನ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಮೊದಲ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯು ಸಿಆರ್‌ಪಿಸಿ ಸೆಕ್ಷನ್ 164 ಅಡಿ ದಾಖಲಿಸಿರುವ ಹೇಳಿಕೆಯ ನಿರ್ದಿಷ್ಟ ಭಾಗವನ್ನು ತೆಗೆದು ಹಾಕಬೇಕು ಎಂಬುದು ಅರ್ಜಿದಾರರ ಕೋರಿಕೆಯಾಗಿತ್ತು. ಇದನ್ನು ನ್ಯಾಯಾಲಯ ಪುರಸ್ಕರಿಸಿಲ್ಲ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್), 376 (3), 504 ಮತ್ತು ಪೋಕ್ಸೊ ಕಾಯಿದೆ ಸೆಕ್ಷನ್ 5 (ಎಲ್) ಮತ್ತು 6ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.
ಅರ್ಜಿದಾರರ ಪರವಾಗಿ ವಕೀಲ ಕೆ ಬಿ ಕೆ ಸ್ವಾಮಿ ವಕಾಲತ್ತು ಹಾಕಿದ್ದು, ಹಿರಿಯ ವಕೀಲ ಸಿ ವಿ ನಾಗೇಶ್ ವಾದಿಸಿದ್ದರು.
ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಮಠದಲ್ಲಿ ಬಂಧಿಸಿದ್ದರು. ಆನಂತರ ಮತ್ತೆ ಇಬ್ಬರು ಬಾಲಕಿಯರು ನೀಡಿದ್ದ ದೂರು ಆಧರಿಸಿ, ಪೋಕ್ಸೊ, ಐಪಿಸಿಯ ವಿವಿಧ ಸೆಕ್ಷನ್‌ಗಳು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ ಹಾಗೂ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಶಿವಮೂರ್ತಿ ಶರಣರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮುಂದೆ ಶರಣರ ವಿರುದ್ಧ ದಾಖಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿಯ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ತದನಂತರ ಹೈಕೋರ್ಟ್ ಸ್ವಾಮೀಜಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ, ಇದರ ವಿರುದ್ಧ ಮೇಲ್ಮನವಿ ಸಲ್ಲಿಕೆಯಾಗಿ ಸುಪ್ರೀಂ ಕೋರ್ಟ್ ಒಂದು ವರ್ಷದಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಅಧೀನ ನ್ಯಾಯಾಲಯಕ್ಕೆ ಆದೇಶಿಸಿ ಶರಣರನ್ನು ಮತ್ತೆ ಜೈಲಿಗೆ ಕಳುಹಿಸಿತ್ತು.