

ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ ಸಾವಿನ ಕುರಿತು ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲ್ಲೂಕಿಗೆ ಮೂರನೇ ಬಾರಿಗೆ ರಾಜ್ಯ ಸರ್ಕಾರ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ ಏಕಸದಸ್ಯ ಪೀಠ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಿಕೊಳ್ಳುವಂತೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಸ್ ಸುನೀಲ್ ದತ್ ಯಾದವ್ ಮತ್ತು ಎಸ್ ರಾಚಯ್ಯ ಅವರ ರಜಾಕಾಲೀನ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ತಿಮರೋಡಿ ಪರ ವಕೀಲರು “ಪ್ರಕರಣವು ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ. ಅರ್ಜಿದಾರರಿಗೆ ಕಿರುಕುಳ ನೀಡಲೆಂದೇ ಇಡೀ ರಾಜ್ಯದ ಆಡಳಿತ ಯಂತ್ರ ಅವರ ಹಿಂದೆ ಬಿದ್ದಿದೆ. ಖುಲಾಸೆಗೊಂಡ ಪ್ರಕರಣಗಳನ್ನು ಉಲ್ಲೇಖಿಸಿ ಗಡಿಪಾರು ಆದೇಶ ಹೊರಡಿಸಲಾಗಿದೆ. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿದೆ. ಆದ್ದರಿಂದ, ಗಡಿಪಾರು ಆದೇಶಕ್ಕೆ ತಡೆ ನೀಡಬೇಕು” ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಗಡಿಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ಬಲವಾಗಿ ಆಕ್ಷೇಪಿಸಿದರು.
ವಾದ-ಪ್ರತಿವಾದ ಆಲಿಸಿದ ಪೀಠವು ಪ್ರಕರಣದ ಮೆರಿಟ್ ಬಗ್ಗೆ ಉಲ್ಲೇಖಿಸುವುದಿಲ್ಲ. ಆದರೆ, ಮೇಲ್ಮನವಿ ಸಲ್ಲಿಸಿರುವುದು ತಾಂತ್ರಿಕವಾಗಿ ತಪ್ಪಾಗಿದೆ. ಏಕಸದಸ್ಯ ಪೀಠದ ಆದೇಶದಂತೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ನೇರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತವಲ್ಲ. ಆ ಹಿನ್ನೆಲೆಯಲ್ಲಿ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿತು. ಅಲ್ಲದೇ ಅರ್ಜಿ ಸಂಬಂಧ ಸರ್ಕಾರ, ಪುತ್ತೂರು ವಿಭಾಗಾಧಿಕಾರಿ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿತು.