ಭ್ರಷ್ಟಾಚಾರ ನಿಯಂತ್ರಣ, ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಧರಿಸಲು ಸೂಕ್ತವಾದ ಬಾಡಿ ವೋರ್ನ್ ಕ್ಯಾಮೆರಾಗಳನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದ್ದು, ಮನವಿ ವಿಲೇವಾರಿ ಮಾಡಿದೆ.
ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠವು ನಡೆಸಿತು.
ಇದಕ್ಕೂ ಮುನ್ನ, ಸರ್ಕಾರದ ಪರ ವಕೀಲೆ ಎಚ್ ವಾಣಿ ಅವರು “ಒಟ್ಟು 2,680 ಬಾಡಿ ವೋರ್ನ್ ಕ್ಯಾಮೆರಾಗಳ ಖರೀದಿಗೆ ಕಾರ್ಯಾದೇಶ ಹೊರಡಿಸಲಾಗಿದ್ದು, ಮೂರು ಪ್ರತ್ಯೇಕ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗಾಗಲೇ 1,097 ಕ್ಯಾಮೆರಾಗಳನ್ನು ಕಂಪನಿಗಳು ಪೂರೈಸಿವೆ. ಉಳಿದ ಕ್ಯಾಮೆರಾಗಳನ್ನು ಖರೀದಿಸಿದ ನಂತರ, ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಅವುಗಳ ಬಳಕೆ ಮಾಡಲಾಗುವುದು” ಎಂದು ತಿಳಿಸಿ, ಕಾರ್ಯಾದೇಶದ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು.
ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಅವರು “ಈ ಹಿಂದೆಯೂ ಸರ್ಕಾರ 75 ಲಕ್ಷ ರೂಪಾಯಿ ವೆಚ್ಚ ಮಾಡಿ 50 ಬಾಡಿ ವೋರ್ನ್ ಕ್ಯಾಮೆರಾಗಳನ್ನು ಖರೀದಿಸಿತ್ತು. ಆದರೆ, ಅವುಗಳನ್ನು ಬಳಕೆ ಮಾಡಿರಲಿಲ್ಲ. ಆದ್ದರಿಂದ, ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿ, ಅವುಗಳನ್ನು ಬಳಕೆ ಮಾಡಲು ಹಾಗೂ ಹೆಚ್ಚುವರಿ ಕ್ಯಾಮೆರಾಗಳನ್ನು ಖರೀದಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಲಾಗಿತ್ತು. ಈಗ ಖರೀದಿಸುವ ಕ್ಯಾಮೆರಾಗಳನ್ನೂ ಹಿಂದಿನಂತೆಯೇ ಬಳಕೆ ಮಾಡದಂತೆ ಇಡಬಾರದು” ಎಂದು ಸರ್ಕಾರಕ್ಕೆ ನಿರ್ದೇಶಿಬೇಕು ಎಂದು ಕೋರಿದರು.
ವಾದ ಆಲಿಸಿದ ಪೀಠವು “ಸರ್ಕಾರ ಈಗಾಗಲೇ ಬಾಡಿ ವೋರ್ನ್ ಕ್ಯಾಮೆರಾಗಳನ್ನು ಖರೀದಿಸಲು ಕ್ರಮ ಕೈಗೊಂಡಿದೆ. ಸ್ಮಾರ್ಟ್ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆ ಜಾರಿಗಾಗಿ ಆ ಕ್ಯಾಮೆರಾಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಕರ್ತವ್ಯ ನಿರ್ವಹಣೆ ವೇಳೆ, ಕ್ಯಾಮೆರಾಗಳನ್ನು ಧರಿಸುವಂತೆ ಪೊಲೀಸ್ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಸರ್ಕಾರಕ್ಕೆ ನಿರ್ದೇಶಿಸಿತು.
ಬಾಡಿ ಕ್ಯಾಮರಾ ಅಳವಡಿಸಿಕೊಳ್ಳುವುದರಿಂದ ಪೊಲೀಸ್ ಸಿಬ್ಬಂದಿ ಎಸಗುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು. ಸಿಬ್ಬಂದಿ ಕಾರ್ಯವೈಖರಿಯನ್ನು ಸಂಬಂಧಪಟ್ಟ ಠಾಣೆಗಳಿಂದಲೇ ಗಮನಿಸಿ ಮೇಲ್ವಿಚಾರಣೆ ನಡೆಸಬಹುದು. ಇದಲ್ಲದೆ, ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವವರಿಗೂ ಭಯ ಹುಟ್ಟುವ ಜತೆಗೆ, ಪೊಲೀಸರಿಗೂ ರಕ್ಷಣೆ ಸಿಕ್ಕಂತಾಗುತ್ತದೆ. ಆದ್ದರಿಂದ, ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬಾಡಿ ಕ್ಯಾಮೆರಾ ಖರೀದಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.