ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆ ಅಗಲೀಕರಣ: ಅಫಿಡವಿಟ್‌ ಸಲ್ಲಿಕೆಗೆ ಹೈಕೋರ್ಟ್‌ ನಿರ್ದೇಶನ

ಸಮರ್ಪಣಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠ.
Karnataka High Court
Karnataka High Court

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯನ್ನು ಅಗಲೀಕರಿಸುವುದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಿರುವ ಕ್ರಮಗಳ ಕುರಿತ ಮಾಹಿತಿಯನ್ನು ಮೂರು ವಾರದಲ್ಲಿ ಅಫಿಡವಿಟ್‌ ಮೂಲಕ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸುವ ಸಲುವಾಗಿ ಅಗಲೀಕರಣ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಅರ್ಜಿ ಕುರಿತು ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸಲ್ಲಿಸಿರುವ ಅಫಿಡವಿಟ್‌ ಅನ್ನು ಈ ವೇಳೆ ಪೀಠಕ್ಕೆ ಸಲ್ಲಿಸಲಾಯಿತು.

ಪ್ರಕರಣದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಈಗಾಗಲೇ ಭೂಮಿ ನೀಡಿರುವ ಮಾಲೀಕರಿಗೆ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದ ವ್ಯಾಜ್ಯವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದೆ. ಬಳ್ಳಾರಿ ರಸ್ತೆಯಲ್ಲಿ ಸಂಚಾರಿ ದಟ್ಟಣೆ ಸಮಸ್ಯೆ ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅರ್ಜಿ ಕುರಿತು ಹೈಕೋರ್ಟ್ ಈ ಹಿಂದೆ ನೀಡಿರುವ ನಿರ್ದೇಶನದ ಪ್ರಕಾರ 2022ರ ಸೆಪ್ಟೆಂಬರ್‌ 16ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ವಿವರಿಸಲಾಗಿದೆ.

ಸದ್ಯ ರಾಜ್ಯ ಸರ್ಕಾರದ ಬಳಿ ಎಷ್ಟು ಭೂಮಿ ಲಭ್ಯವಿದೆಯೋ ಅಲ್ಲಿಯವರೆಗೆ ರಸ್ತೆ ಅಗಲೀಕರಣ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ರಸ್ತೆ ಅಗಲೀಕರಣ ಕಾಮಗಾರಿ ನಡೆಸುವ ಮುನ್ನ ಭೂ ಮಾಲೀಕರಿಗೆ ಟಿಡಿಆರ್ ನೀಡಬೇಕಿದೆ. ಅದಕ್ಕಾಗಿ ದೊಡ್ಡ ಮೊತ್ತದ ಅಗತ್ಯವಿದೆ. ಒಂದು ವೇಳೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರ ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ, ವಿತರಿಸಿದ ಟಿಡಿಆರ್ ವಸೂಲಿ ಮಾಡಲು ಕಷ್ಟವಾಗುತ್ತದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೆ, ರಸ್ತೆ ಅಗಲೀಕರಣ ಮಾಡಿ ಸಂಚಾರ ಸುಗಮಗೊಳಿಸುವ ಆಯ್ಕೆಗಳ ಬಗ್ಗೆ ಚರ್ಚಿಸಲಾಗಿದೆ. ಸದ್ಯ ರಾಜ್ಯ ಸರ್ಕಾರದ ಬಳಿ ಲಭ್ಯವಿರುವ ಭೂಮಿಯಲ್ಲಿ ಕೂಡಲೇ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭಿಸುವ ವಿಚಾರವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಲಾಗುವುದು. ಅದರಂತೆ ಈ ಮಾರ್ಗದಲ್ಲಿ ಅಗತ್ಯವಿರುವಲ್ಲಿ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲು ಪರಿಶೀಲಿಸಲಾಗುವುದು. ಅರಮನೆ ಮೈದಾನದಲ್ಲಿರುವ ಕಲ್ಯಾಣ ಮಂಟಪಗಳ ಪ್ರವೇಶಕ್ಕೆ ಪರ್ಯಾಯ ಮಾರ್ಗ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದನ್ನು ಪರಿಶೀಲಿಸಿದ ಪೀಠವು ರಸ್ತೆ ಅಗಲೀಕರಣ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಸರ್ಕಾರದ ಬಳಿ ಎಷ್ಟು ಭೂಮಿ ಲಭ್ಯವಿದೆ? ಎಲ್ಲಿಂದ-ಎಲ್ಲಿಯವರೆಗೆ ಮತ್ತು ಹೇಗೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಆದ್ದರಿಂದ, ಅಗಲೀಕರಣಕ್ಕೆ ಕೈಗೊಳ್ಳುವ ಕ್ರಮಗಳ ಕುರಿತು ಮುಂದಿನ ಮೂರು ವಾರದಲ್ಲಿ ವಿವರವಾದ ಅಫಿಡವಿಟ್‌ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್‌ 17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪರೀತ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದೆ. 2016ರಲ್ಲಿ ಸರ್ಕಾರ ತಿಳಿಸಿರುವಂತೆ ರಸ್ತೆಯಲ್ಲಿ ನಿತ್ಯವೂ 60 ರಿಂದ 75 ಸಾವಿರ ವಾಹನಗಳು ಸಂಚರಿಸುತ್ತವೆ. ಅರಮನೆ ಮೈದಾನದಲ್ಲಿ ಮದುವೆ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ವಾಹನ ಸಂಚಾರ ಮತ್ತಷ್ಟು ಹೆಚ್ಚಾಗುತ್ತದೆ. ಸಂಜೆ ಮತ್ತು ಬೆಳಗ್ಗೆ ಸಮಯದಲ್ಲಿ ಹೆಬ್ಬಾಳದಿಂದ ಬಿಡಿಎ ಜಂಕ್ಷನ್ ವರೆಗೆ ವಾಹನಗಳ ಸಂಚರಿಸುವುದೇ ಕಷ್ಟವಾಗಿದೆ. ಆದ್ದರಿಂದ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

Related Stories

No stories found.
Kannada Bar & Bench
kannada.barandbench.com