ಚಾಮುಂಡಿ ಬೆಟ್ಟದಲ್ಲಿ ಕಾಮಗಾರಿಗಳನ್ನು ತಕ್ಷಣ ನಿಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಆದೇಶ; ನ್ಯಾಯಾಂಗ ನಿಂದನೆ ಎಚ್ಚರಿಕೆ

ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವಂತಹ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಮಾಡಿರುವ ಹೈಕೋರ್ಟ್‌.
Mysore Chamundi temple and Karnataka HC
Mysore Chamundi temple and Karnataka HC
Published on

ನ್ಯಾಯಾಲಯಕ್ಕೆ ನೀಡಿದ್ದ ಭರವಸೆ ಉಲ್ಲಂಘಿಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯದ ಆವರಣದಲ್ಲಿ ಕಾಮಗಾರಿ ಮುಂದುವರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಈಚೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ವಿವಾದಿತ ಸ್ಥಳದಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ನಿರ್ಮಾಣ ಚಟುವಟಿಕೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವಂತಹ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್‌ ಅವರ ಏಕದಸದ್ಯ ಪೀಠ ಮಧ್ಯಂತರ ಆದೇಶ ಮಾಡಿದೆ.

ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ನಿರ್ಮಾಣ ಕಾಮಗಾರಿಗಳನ್ನು ತಕ್ಷಣವೇ ನಿಲ್ಲಿಸಬೇಕು. ಕಾಮಗಾರಿಗಾಗಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ 47 ಕೋಟಿ ರೂಪಾಯಿಗಳನ್ನು ಯಾವ ಕೆಲಸಗಳಿಗೆ ಬಳಸಲಾಗಿದೆ, ಎಷ್ಟು ಹಣ ವೆಚ್ಚ ಮಾಡಲಾಗಿದೆ ಎಂಬ ಬಗ್ಗೆ ಎರಡು ವಾರಗಳಲ್ಲಿ ವಿವರವಾದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗೆ ತಾಕೀತು ಮಾಡಿರುವ ಪೀಠವು ಭವಿಷ್ಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆಯಾದಲ್ಲಿ ಅದನ್ನು "ಗಂಭೀರ ನ್ಯಾಯಾಂಗ ನಿಂದನೆ" ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ.

ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಯಾವುದೇ ಶಾಶ್ವತ ಕಾಮಗಾರಿ ನಡೆಸುವುದಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ, ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಫೋಟೋಗಳನ್ನು ಗಮನಿಸಿದರೆ ದೇವಾಲಯದ ಆವರಣದಲ್ಲಿ ಬೃಹತ್ ಮಟ್ಟದ ಶಾಶ್ವತ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದನ್ನು ಸ್ಪಷ್ಟವಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

Also Read
ಚಾಮುಂಡೇಶ್ವರಿ ದೇವಸ್ಥಾನದ ಚರ-ಸ್ಥಿರ ಆಸ್ತಿ ವಿಲೇವಾರಿ ಮಾಡದಂತೆ ಪ್ರಾಧಿಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ

ಕೇಂದ್ರ ಸರ್ಕಾರದಿಂದ 47 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂಬ ಕಾರಣ ನೀಡಿ ನಿರ್ಮಾಣ ಕಾರ್ಯವನ್ನು ಸಮರ್ಥಿಸಿಕೊಂಡಿದ್ದ ಜಿಲ್ಲಾಧಿಕಾರಿಗಳ ‌ನಡೆಯು ದುರುದ್ದೇಶಪೂರಿತ ಮಾತ್ರವಲ್ಲ, ಕಾನೂನಿನಲ್ಲಿ ಸಂಪೂರ್ಣವಾಗಿ ಅಸಮರ್ಥನೀಯವೂ ಆಗಿದೆ. ಜಿಲ್ಲಾಧಿಕಾರಿಯು ರಾಜ್ಯದ ಅಧಿಕಾರಿಯಾಗಿದ್ದು, ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವರ ಆದ್ಯ ಕರ್ತವ್ಯವಾಗಿರುತ್ತದೆ. ಆದೇಶ ಪಾಲಿಸದಿರುವುದನ್ನು ಸಮರ್ಥಿಸುವ ಯಾವುದೇ ಪ್ರಯತ್ನವು ನ್ಯಾಯಾಂಗ ಅಧಿಕಾರದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಿಡಿಕಾರಿರುವ ಪೀಠವು ಹಣಕಾಸಿನ ಮಂಜೂರಾತಿಯು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಲು ಪರವಾನಗಿ ನೀಡುವುದಿಲ್ಲ ಎಂದು ತೀಕ್ಷ್ಣವಾಗಿ ನುಡಿದಿದೆ.

Kannada Bar & Bench
kannada.barandbench.com