ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಧಿಸುವ ಶುಲ್ಕಕ್ಕೆ ಸಂಬಂಧಿಸಿದಂತೆ ಪ್ರಚಾರ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಬುಧವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಕೋವಿಡ್‌ಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ವಿವಿಧ ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪ್ರದೀಪ್ ಸಿಂಗ್ ಯೆರೂರ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ರಾಜ್ಯ ಸಾರಿಗೆ ಬಸ್‌ಗಳಲ್ಲಿ ಬ್ಯಾನರ್‌ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುವುದು ಉತ್ತಮ ಎಂದು ಪೀಠ ಅಭಿಪ್ರಾಯಪಟ್ಟಿತು.
ಜನರಿಗೆ ಮಾಹಿತಿ ಇಲ್ಲದೇ ಇರುವುದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಖಾಸಗಿ ಆಸ್ಪತ್ರೆಗಳು ಸರ್ಕಾರ ವಿಧಿಸಿರುವ ಶುಲ್ಕಕ್ಕಿಂತ ದುಬಾರಿ ಶುಲ್ಕ ವಿಧಿಸುತ್ತಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆಗ ಪೀಠವು ಪ್ರಚಾರದ ಕುರಿತ ಸಲಹೆಗಳನ್ನು ಹೇಗೆ ಜಾರಿಗೊಳಿಸಲಾಗುತ್ತದೆ ಎಂಬುದನ್ನು ಅಧಿಕೃತವಾಗಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತು.
ಗಣೇಶ ಹಬ್ಬದ ಅಂಗವಾಗಿ ಜಾರಿಗೊಳಿಸಲಾಗಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೀಠಕ್ಕೆ ಭರವಸೆ ನೀಡಿದವು. ಕೇರಳದಿಂದ ರಾಜ್ಯಕ್ಕೆ ಪ್ರವಾಸ ಮಾಡುವವರನ್ನು ಕೇಂದ್ರೀಕರಿಸಿ ಜಾರಿಗೊಳಿಸಲಾಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಯಾಗುವುದನ್ನು ಖಾತರಿಪಡಿಸಬೇಕು ಎಂದು ಪೀಠ ಹೇಳಿದೆ.
ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯಕ್ಕೆ 22.5 ಲಕ್ಷ ಲಸಿಕೆಯ ಡೋಸ್‌ಗಳು ಪೂರೈಕೆಯಾಗಲಿವೆ. ಕೋವಿಡ್ ಎರಡನೇ ಅಲೆಗಿಂತ ಮೂರನೇ ಅಲೆಯು ತೀವ್ರವಾದರೆ ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ ಎಂದು ರಾಜ್ಯ ಸರ್ಕಾರವು ಪೀಠಕ್ಕೆ ಮಾಹಿತಿ ನೀಡಿತು.