
ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.
ನ್ಯಾ.ಕುನ್ಹಾ ಅವರ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ರದ್ದುಪಡಿಸುವಂತೆ ಕೋರಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ನಿರ್ದೇಶಕ ಸುನಿಲ್ ಮ್ಯಾಥ್ಯೂ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಮತ್ತು ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿತು.
ಅರ್ಜಿದಾರರ ಪರ ವಕೀಲ ಬಿ ಕೆ ಸಂಪತ್ ಕುಮಾರ್ ಅವರು “ನ್ಯಾ. ಕುನ್ಹಾ ಅವರ ಆಯೋಗವು ಅರ್ಜಿದಾರರ ವಾದ ಆಲಿಸದೆ ಏಪಕ್ಷೀಯವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ. ಆದರೆ, ವರದಿ ಮಾಧ್ಯಮಗಳಿಗೆ ಸೋರಿಕೆಯಾಗಿದೆ. ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳಿಂದ ಅರ್ಜಿದಾರರ ಚಾರಿತ್ರ್ಯವಧೆಯಾಗುತ್ತಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಆದರೆ, ಈ ಹಂತದಲ್ಲಿ ಅರ್ಜಿದಾರರಿಗೆ ವರದಿ ನೀಡಲಾಗುವುದಿಲ್ಲ” ಎಂದು ತಿಳಿಸಿದರು.
ಈ ಹೇಳಿಕೆ ಪರಿಗಣಿಸಿದ ಪೀಠವು ನ್ಯಾ.ಕುನ್ಹಾ ಅವರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿತು.