
ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿ ಗೆದ್ದಿದ್ದು ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಲಾದ ಚುನಾವಣಾ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಕಾಂಗ್ರೆಸ್‌ನ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ ಎಸ್ ಗಾಯತ್ರಿ ಸಿದ್ದೇಶ್ವರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ವಜಾಗೊಳಿಸಿತು.
“ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಆಮಿಷ ಎಂದು ಪರಿಗಣಿಸಲು ಆಗದು” ಎಂಬ ಪ್ರಭಾ ಮಲ್ಲಿಕಾರ್ಜುನ್ ಅವರ ಪರ ವಕೀಲರ ವಾದವನ್ನು ನ್ಯಾಯಾಲಯವು ಮಾನ್ಯ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರಭಾ ಮಲ್ಲಿಕಾರ್ಜುನ್ ಪರ ಹೈಕೋರ್ಟ್ ವಕೀಲ ಪ್ರಶಾಂತ್ ಗೌಡರ್ ವಾದಿಸಿರು.
ಪ್ರಭಾ ಅವರು, ಮತದಾರರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸುವ ಮೂಲಕ ಮಹಿಳೆಯರಿಗೆ ವರ್ಷಕ್ಕೆ ₹1 ಲಕ್ಷ ಕೊಡುವ ಭರವಸೆ ನೀಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯಿದೆ–1951ರ ಸೆಕ್ಷನ್ 123(1), 123(2), 123(4) ಮತ್ತು 123(6)ಕ್ಕೆ ವಿರುದ್ಧವಾಗಿದೆ. ಮತದಾರರಿಗೆ ಲಂಚದ ಆಮಿಷ ಒಡ್ಡಿರುವ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿರುವ ಇವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.