ಗಣಿ ಬಾಧಿತ ವಿಜಯನಗರ ಜಿಲ್ಲೆಗೆ ನಿಧಿ ವರ್ಗಾವಣೆ: ಪಿಐಎಲ್‌ ವಜಾ ಮಾಡಿದ ಹೈಕೋರ್ಟ್‌

ಹಣ ವರ್ಗಾವಣೆ ವಿಚಾರ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ. ಸಾರ್ವಜನಿಕ ಹಿತಾಸಕ್ತಿ ವ್ಯಾಪ್ತಿಗೆ ಇದು ಬರುವುದಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿ ಆದೇಶಿತು.
High Court of Karnataka
High Court of Karnataka
Published on

ಗಣಿ ಬಾಧಿತ ಪ್ರದೇಶಗಳ ಅಭಿವೃದ್ದಿಗಾಗಿ ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ ಮೂಲಕ ಸಂಗ್ರಹಿಸಲಾಗಿರುವ ನಿಧಿಯ ಮೊತ್ತದಲ್ಲಿ ಶೇ.28ರಷ್ಟನ್ನು ನೂತನವಾಗಿ ರಚಿಸಲಾಗಿರುವ ವಿಜಯನಗರ ಜಿಲ್ಲೆಗೆ ವರ್ಗಾಯಿಸುವಂತೆ ಹೊರಡಿಸಲಾದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕು ತೋರಣಗಲ್‌ನ ಧರಣಿ ಮಹಿಳಾ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ವೈ ಜಿ ದಿಲೀಪ್ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್‌ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲರು, ಬಳ್ಳಾರಿ ಜಿಲ್ಲೆಯಲ್ಲಿ ಸಂಗ್ರಹವಾಗುವ ನಿಧಿಯಲ್ಲಿ ಶೇ.28ರಷ್ಟನ್ನು ವಿಜಯನಗರ ಜಿಲ್ಲೆಗೆ ಕೊಟ್ಟರೆ, ಬಳ್ಳಾರಿ ಜಿಲ್ಲೆಯ ಜನರಿಗೆ ಅನ್ಯಾಯವಾಗಲಿದೆ. ಆದ್ದರಿಂದ, ಆದೇಶ ರದ್ದುಪಡಿಸಬೇಕು. ನಿಧಿ ವರ್ಗಾವಣೆ ಮಾಡುವುದಕ್ಕೆ ನಿರ್ಬಂಧ ಹೇರಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ನಿಧಿ ವರ್ಗಾವಣೆ ಕುರಿತ ಆದೇಶದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಉಲ್ಲಂಘನೆ ಆಗಿಲ್ಲ ಎಂದರು.

Also Read
ಗಣಿ ಬಾಧಿತ ವಿಜಯನಗರ ಜಿಲ್ಲೆಗೆ ನಿಧಿ ವರ್ಗಾವಣೆಗೆ ಆಕ್ಷೇಪ: ವಿವರಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ರಾಜ್ಯ ಸರ್ಕಾರದ ಪರ ವಕೀಲೆ ನಿಲೋಫರ್ ಅಕ್ಬರ್ ಅವರು “ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ ನಿಧಿಯಿಂದ ವಿಜಯನಗರ ಜಿಲ್ಲೆಗೆ ಹೋಗುವ ಹಣ ಆ ಜಿಲ್ಲೆಯ ಬಡ ಜನರು ವಿಶೇಷವಾಗಿ ಮಹಿಳೆಯರ ಅಭಿವೃದ್ಧಿಗೆ ಬಳಕೆಯಾಗುತ್ತದೆ” ಎಂದರು.

ವಾದ ಪ್ರತಿವಾದ ಆಲಿಸಿದ ಪೀಠವು ಹಣ ವರ್ಗಾವಣೆ ವಿಚಾರ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ. ಸಾರ್ವಜನಿಕ ಹಿತಾಸಕ್ತಿ ವ್ಯಾಪ್ತಿಗೆ ಇದು ಬರುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿತು.

Kannada Bar & Bench
kannada.barandbench.com