ಜಾತಿ ಪರಿಶೀಲನಾ ಸಮಿತಿ ನಿರ್ಣಯ ಪ್ರಶ್ನಿಸಿದ್ದ ಕೋಲಾರ ಶಾಸಕ ಮಂಜುನಾಥ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಹೈಕೋರ್ಟ್‌ನ ಈ ಆದೇಶದಿಂದ ಅವರ ಹಾಲಿ ಶಾಸಕ ಸ್ಥಾನಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಗೆದ್ದಾಗ ಪಡೆದುಕೊಂಡಿದ್ದ ಸೌಲಭ್ಯ ಪೂರ್ವಾಯನ್ವಯವಾಗುವಂತೆ ಅವರಿಂದ ವಾಪಸ್ ಪಡೆಯಬಹುದಾಗಿದೆ ಎನ್ನಲಾಗಿದೆ.
G Manjunath and Karnataka HC
G Manjunath and Karnataka HC

ಕೋಲಾರದ ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮುಳಬಾಗಿಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತನೂರು ಮಂಜುನಾಥ್) ಅವರಿಗೆ ಜಾತಿ ಸಿಂಧುತ್ವ ಪ್ರಕರಣದಲ್ಲಿ ಮತ್ತೆ ಹಿನ್ನಡೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯ ಪ್ರಶ್ನಿಸಿ ಆವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ತಿರಸ್ಕರಿಸಿದೆ.

ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಪ್ರಶ್ನಿಸಿ ಜಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.

ಹೈಕೋರ್ಟ್‌ನ ಈ ಆದೇಶದಿಂದ ಅವರ ಹಾಲಿ ಶಾಸಕ ಸ್ಥಾನಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಗೆದ್ದಾಗ ಪಡೆದುಕೊಂಡಿದ್ದ ಸೌಲಭ್ಯಗಳನ್ನು ಪೂರ್ವಾಯನ್ವಯವಾಗುವಂತೆ ಅವರಿಂದ ವಾಪಸ್ ಪಡೆದುಕೊಳ್ಳಬಹುದಾಗಿದೆ. ಒಂದೊಮ್ಮೆ ಇದೇ ವಿಚಾರವಾಗಿ ಅವರ ವಿರುದ್ಧ ಹೈಕೋರ್ಟ್‌ನಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟರೆ 6 ವರ್ಷಗಳ ಕಾಲ ಚುನಾವಣಾ ಸ್ಪರ್ಧೆಗೆ ನಿರ್ಬಂಧ ಸೇರಿದಂತೆ ಕೆಲವು ಕಾನೂನು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎನ್ನಲಾಗಿದೆ.

ಮಂಜುನಾಥ್ ಅವರು ಬುಡಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಇದನ್ನು ಮಂಜುನಾಥ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಬುಡಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರಿದೆ. ಸರ್ಕಾರದ ಪರ ವಕೀಲ ಸಿ ಜಗದೀಶ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ: ಜಿ ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಈ ಪ್ರಕರಣ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆಗೊಳಪಟ್ಟಿತ್ತು. ಅಂತಿಮವಾಗಿ ಹೈಕೋರ್ಟ್ ಮಂಜುನಾಥ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿ, ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಾ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು ಎಂದೂ ಸುಪ್ರೀಂ ಕೋರ್ಟ್ ಹೇಳಿತ್ತು. ಅದರಂತೆ ಜಾತಿ ಪರಿಶೀಲನಾ ಸಮಿತಿಯ ನಿರ್ಣಯವನ್ನು ಮಂಜುನಾಥ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದೀಗ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

Kannada Bar & Bench
kannada.barandbench.com