
ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಆಗಸ್ಟ್ 11ರ ರಾತ್ರಿ ನಡೆದಿದ್ದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪ ಮುಕ್ತಿ ಕೋರಿ 15 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ವಜಾಗೊಳಿಸಿದೆ.
ಆರೋಪಿಗಳಾದ ಸೈಯದ್ ಅಬ್ಬಾಸ್ ಸೇರಿ 15 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ಕೆ ಎಸ್ ಹೇಮಲೇಖಾ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ.
“ಅರ್ಜಿದಾರರು ಪ್ರಕರಣದಿಂದ ಮುಕ್ತಿ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣಾಧೀನ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಇದನ್ನು ಪ್ರಶ್ನಿಸಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಬಹುದು. ಅದಕ್ಕೆ ಬದಲಾಗಿ ಅರ್ಜಿದಾರರು ರಿಟ್ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣೆಗೆ ಅರ್ಹವಲ್ಲ” ಎಂದು ಪೀಠ ತಿಳಿಸಿದೆ.
“ಅರ್ಜಿದಾರರ ವಿರುದ್ಧದ ಆರೋಪವು ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡುವ ಉದ್ದೇಶದಿಂದ ಜಾರಿ ಮಾಡಿರುವ ಕಾನೂನುಬಾಹಿರ ಚಟುವಟಿಕೆಗಳ ನಿಷೇಧ ಕಾಯಿದೆ ಸೆಕ್ಷನ್ 15ರ ವ್ಯಾಪ್ತಿಗೆ ಬರಲಿದೆ. ಅರ್ಜಿದಾರರನ್ನು ಪ್ರಕರಣದಿಂದ ಬಿಡುಗಡೆ ಮಾಡಬೇಕಾದರೆ ಆರೋಪಿಸಲಾದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯ ಪರಿಗಣಿಸುವುದಕ್ಕೆ ಅವಕಾಶವಿರಲಿದೆ. ಹೀಗಾಗಿ, ಅರ್ಜಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಬೇಕಾದ ಯಾವುದೇ ಅಪರೂಪದ ಸನ್ನಿವೇಶ ಎದುರಾಗಿರುವ ಕುರಿತು ಅರ್ಜಿದಾರರು ವಿವರಿಸಲಿಲ್ಲ” ಎಂದು ನ್ಯಾಯಾಲಯ ಆದೇಶಿಸಿದೆ.
ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹೀರ್ ಅವರು, “ಅರ್ಜಿದಾರರ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ. ಆದ್ದರಿಂದ, ತಮ್ಮನ್ನು ಪ್ರಕರಣದಿಂದ ಮುಕ್ತಿಗೊಳಿಸಬೇಕು” ಎಂದು ಕೋರಿದ್ದರು.
ಎನ್‌ಐಎ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್ ಅವರು “ಪ್ರಕರಣದಿಂದ ಮುಕ್ತಿ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಆದರೆ, ಆ ಆದೇಶವನ್ನು ಪ್ರಶ್ನಿಸಿ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಬೇಕು. ಅದಕ್ಕೆ ಬದಲಾಗಿ ಅರ್ಜಿದಾರರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆಗೆ ಅರ್ಹವಿಲ್ಲ” ಎಂದು ವಾದಿಸಿದ್ದರು.
ಪ್ರಕರಣದ ಹಿನ್ನೆಲೆ: ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮಹಮ್ಮದ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ವಿಚಾರ ಹಂಚಿಕೊಂಡಿದ್ದ ಹಿನ್ನೆಲೆಯಲ್ಲಿ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಲಭೆಯಾಗಿತ್ತು. ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.
ಈ ಆರೋಪ ಸಂಬಂಧ ಅರ್ಜಿದಾರರ ವಿರುದ್ಧ ಯುಎಪಿಎ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಎನ್‌ಐಎ ತನಿಖೆ ವಹಿಸಲಾಗಿತ್ತು.
ಆರೋಪಿಗಳ ವಿರುದ್ಧ 120ಬಿ, 143, 145, 147, 188, 353 ಮತ್ತು 427, 436 ಜೊತೆಗೆ 34 ಮತ್ತು 149 ಮತ್ತು ಯುಎಪಿಎ ಸೆಕ್ಷನ್‌ಗಳಾದ 16, 18 ಮತ್ತು 20 ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ನಷ್ಟ ಕಾಯಿದೆ ಸೆಕ್ಷನ್ 2ರ ಅಡಿ ದಾಖಲಿಸಿರುವ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.