ಕಾಲ್ತುಳಿತ ಪ್ರಕರಣ: ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಪ್ರಶ್ನಿಸಿದ್ದ ಪಿಐಎಲ್‌ ಇತ್ಯರ್ಥಪಡಿಸಿದ ಹೈಕೋರ್ಟ್‌

“ಐವರು ಅಧಿಕಾರಿಗಳನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಲಾಗಿದೆ. ಈ ಸಂಬಂಧದ ಅಧಿಸೂಚನೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂಬ ಸರ್ಕಾರದ ಹೇಳಿಕೆಯನ್ನು ದಾಖಲಿಸಿ, ಅರ್ಜಿ ಇತ್ಯರ್ಥಪಡಿಸಿದ ನ್ಯಾಯಾಲಯ.
ಕಾಲ್ತುಳಿತ ಪ್ರಕರಣ: ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಪ್ರಶ್ನಿಸಿದ್ದ ಪಿಐಎಲ್‌ ಇತ್ಯರ್ಥಪಡಿಸಿದ ಹೈಕೋರ್ಟ್‌
Published on

ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಜೂನ್‌ ತಿಂಗಳಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಐವರು ಪೊಲೀಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರವು ಕರ್ತವ್ಯಕ್ಕೆ ಮರು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಇತ್ಯರ್ಥಪಡಿಸಿದೆ.

ಬೆಂಗಳೂರಿನ ನಂದೀಶ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲೆ ನಿಲೋಫರ್‌ ಅಕ್ಬರ್‌ ಅವರು “ಐವರು ಅಧಿಕಾರಿಗಳನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಲಾಗಿದೆ. ಈ ಸಂಬಂಧದ ಅಧಿಸೂಚನೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಹೀಗಾಗಿ, ವಿಚಾರಣೆ ಮುಂದೂಡಬೇಕು” ಎಂದು ಕೋರಿದರು.

ಇದನ್ನು ಆಲಿಸಿದ ಪೀಠವು ಅಧಿಸೂಚನೆಯ ಅಗತ್ಯವಿಲ್ಲ ಎಂದು ಸರ್ಕಾರದ ವಕೀಲೆಯ ಹೇಳಿಕೆಯನ್ನು ದಾಖಲಿಸಿತು.

Also Read
ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವಿಕಾಸ್‌ ಕುಮಾರ್‌ ನೇಮಕ: ಸರ್ಕಾರ, ಆರ್‌ಸಿಬಿ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್‌

ಜೂನ್‌ 4ರಂದು ಸಂಭವಿಸಿದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಕರ್ತವ್ಯ ಲೋಪದ ಮೇಲೆ ಜೂನ್‌ 5ರಂದು ಅಖಿಲ ಭಾರತೀಯ ಸೇವೆಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969, ನಿಯಮ 3(1)(ಎ) ಅಡಿ ಬೆಂಗಳೂರು ಪೊಲೀಸ್‌ ಆಯುಕ್ತ ಬಿ ದಯಾನಂದ್‌, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ವಿಕಾಸ್‌, ಕೇಂದ್ರೀಯ ವಿಭಾಗದ ಡಿಸಿಪಿ ಶೇಖರ್‌ ಎಚ್‌. ತೆಕ್ಕಣ್ಣವರ್‌ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಕರ್ನಾಟಕ ರಾಜ್ಯ ಪೊಲೀಸ್‌ (ಶಿಸ್ತು ಪ್ರಕ್ರಿಯೆ) ನಿಯಮಗಳು 1965, ನಿಯಮ 5ರ ಅಡಿ ಕಬ್ಬನ್‌ ಪಾರ್ಕ್‌ ಡಿವೈಎಸ್‌ಪಿ ಸಿ ಬಾಲಕೃಷ್ಣ ಮತ್ತು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಎ ಕೆ ಗಿರೀಶ್‌ ಅವರನ್ನು ಅಮಾನತುಗೊಳಿಸಿತ್ತು.

ಜುಲೈ 28ರಂದು ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ವಿಕಾಸ್‌ ಹೊರತುಪಡಿಸಿ ಉಳಿದ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕರ್ತವ್ಯಕ್ಕೆ ಮರು ನೇಮಕ ಮಾಡಿತ್ತು. ಆಗಸ್ಟ್‌ 1ರಂದು ವಿಕಾಸ್‌ ಕುಮಾರ್‌ ಅವರನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ಕರ್ತವ್ಯಕ್ಕೆ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರವು ನ್ಯಾಯಮೂರ್ತಿ ಎಸ್‌ ಜಿ ಪಂಡಿತ್‌ ಅವರ ವಿಭಾಗೀಯ ಪೀಠಕ್ಕೆ ತಿಳಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

Kannada Bar & Bench
kannada.barandbench.com