ಎಎಬಿ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.33 ಮೀಸಲು ಕೋರಿಕೆ: ರಾಜ್ಯ ಸರ್ಕಾರ, ಎಎಬಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು ವಕೀಲರ ಸಂಘದ ಹಾಲಿ ಪದಾಧಿಕಾರಿಗಳ ಅಧಿಕಾರವಧಿ 2024ರ ಡಿಸೆಂಬರ್ 19ರಂದು ಕೊನೆಗೊಂಡಿದೆ. 2025ರ ಫೆಬ್ರವರಿ 2ರಂದು ಚುನಾವಣೆ ನಡೆಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.
Election to AAB
Election to AAB
Published on

ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.33ರಷ್ಟು ಮೀಸಲು ಕಲ್ಪಿಸಲು ನಿರ್ದೇಶಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ವಕೀಲರ ಸಂಘಕ್ಕೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರಿನ ವಕೀಲೆ ದೀಕ್ಷಾ ಅಮೃತೇಶ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್‌ ಅವರ ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ವಕೀಲರ ಪರಿಷತ್‌ ಮತ್ತು ಬೆಂಗಳೂರು ವಕೀಲರ ಸಂಘ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ: ಬೆಂಗಳೂರು ವಕೀಲರ ಸಂಘದ ಹಾಲಿ ಪದಾಧಿಕಾರಿಗಳ ಅಧಿಕಾರವಧಿ 2024ರ ಡಿಸೆಂಬರ್ 19ರಂದು ಕೊನೆಗೊಂಡಿದೆ. 2025ರ ಫೆಬ್ರವರಿ 2ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲು ನಿಗದಿಪಡಿಸುವಂತೆ ಬೆಂಗಳೂರು ವಕೀಲರ ಸಂಘ ಸೇರಿದಂತೆ ಅರ್ಜಿಯಲ್ಲಿ ಕಾಣಿಸಲಾಗಿರುವ ಇತರೆ ಪ್ರತಿವಾದಿಗಳಿಗೆ ನಾವು 2024ರ ಡಿಸೆಂಬರ್ 23ರಂದು ಮನವಿ ಸಲ್ಲಿಸಿದ್ದೆವು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮುಂಬರುವ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಆಯ್ಕೆಯ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.33ರಷ್ಟು ಮೀಸಲು ಕಲ್ಪಿಸಬೇಕು ಎಂಬ ತಮ್ಮ ಮನವಿಗೆ ಪೂರಕವಾಗಿ ಪ್ರತಿವಾದಿಗಳು ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಈ ನಿಟ್ಟಿನಲ್ಲಿ ಸಂಘದ ಬೈಲಾಗೆ ತಿದ್ದುಪಡಿ ಮಾಡುವ ಮೂಲಕ ತಮ್ಮ ಮನವಿ ಪತ್ರ ಪರಿಗಣಿಸಿ ಮಹಿಳೆಯರಿಗೆ ಶೇ.33ರಷ್ಟು ಸೀಟುಗಳ ಮೀಸಲು ಕಲ್ಪಿಸಲು ಪ್ರತಿವಾದಿಗಳಿಗೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Kannada Bar & Bench
kannada.barandbench.com