
ಅನುದಾನಿತ ಕಾಲೇಜುಗಳ ಗ್ರಂಥಪಾಲಕರಿಗೆ ನೀಡಲಾಗುವ ವೇತನಕ್ಕೆ ಸರಿಸಮನಾಗಿ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಗ್ರಂಥಪಾಲಕರಿಗೆ ವೇತನ ನೀಡುವ ವಿಚಾರವಾಗಿ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಗ್ರಂಥಪಾಲಕರ ಸಂಘ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್ ಅವರ ವಿಭಾಗೀಯ ಪೀಠ ನಡೆಸಿತು.
ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ಪೀಠವು ಸರ್ಕಾರ ಹಾಗೂ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಫೆಬ್ರವರಿ 28ಕ್ಕೆ ವಿಚಾರಣೆ ಮುಂದೂಡಿತು. ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಪದವಿ ಪೂರ್ವ ಮಂಡಳಿ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಅವರ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ವೇತನ ತಾರತಮ್ಯ ಪ್ರಶ್ನಿಸಿ ಅರ್ಜಿದಾರ ಸಂಘವು 2018ರಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅನುದಾನಿತ ಕಾಲೇಜುಗಳ ಗ್ರಂಥಪಾಲಕರಿಗೆ ನೀಡಲಾಗುವ ವೇತನಕ್ಕೆ ಸರಿಸಮನಾದ ವೇತನವನ್ನು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಗ್ರಂಥಪಾಲಕರಿಗೆ ನೀಡುವ ನಿಟ್ಟಿನಲ್ಲಿ ಮೂರು ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ 2024ರ ಜುಲೈ 19ರಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿತ್ತು. ಈವರೆಗೆ ಆ ಆದೇಶ ಪಾಲನೆ ಮಾಡಿಲ್ಲ. ಆದ್ದರಿಂದ ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶ ಪಾಲಿಸದ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ.