ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಹೊರ ವಲಯದಲ್ಲಿರುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನ ಇರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೀಡಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕರಾಗಿರುವ ರಮಣಗೌಡ ಬಿ ಪಾಟೀಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು, ಕಲಬುರ್ಗಿ ವಲಯದ ಪರಿಸರ ಅಧಿಕಾರಿ ಹಾಗೂ ಹಿರಿಯ ಪರಿಸರ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಅರ್ಜಿದಾರರ ಪರ ವಕೀಲರು ಕೆಎಸ್‌ಪಿಸಿಬಿ ವಕೀಲ ಗುರುರಾಜ್ ಎಸ್. ಜೋಶಿ ಅವರಿಗೆ ಅರ್ಜಿಯ ಪ್ರತಿ ಹಂಚಬಹುದು. ಅರ್ಜಿದಾರರ ಕೋರಿಕೆಯಂತೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.
ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವಂತೆ ಕಲಬುರ್ಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜನವರಿ 18ರಂದು ನೋಟಿಸ್ ಜಾರಿ ಮಾಡಿದ್ದರು. ಆನಂತರ ಕೆಎಸ್‌ಪಿಸಿಬಿ ಅಧ್ಯಕ್ಷರು ಜನವರಿ 25ರಂದು ಆದೇಶ ಮಾಡಿದ್ದರು. ಈ ಎರಡೂ ಆದೇಶವನ್ನು ವಜಾ ಮಾಡಬೇಕು ಎಂಬುದು ಅರ್ಜಿದಾರರ ಕೋರಿಕೆಯಾಗಿದೆ. ಮಧ್ಯಂತರ ಪರಿಹಾರದ ಭಾಗವಾಗಿ ಕೆಎಸ್‌ಪಿಸಿಬಿ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು.