ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶವನ್ನು ಅ.8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್‌ ಆದೇಶ

ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ ಎಂದು ತಿಮರೋಡಿ ಆಕ್ಷೇಪಿಸಿದ್ದರು.
ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶವನ್ನು ಅ.8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್‌ ಆದೇಶ
Published on

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

Also Read
ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮಹೇಶ್‌ ಶೆಟ್ಟಿ ತಿಮರೋಡಿ

ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದರು.

Kannada Bar & Bench
kannada.barandbench.com